Home ಜಿಲ್ಲೆ ಕಲಬುರಗಿ ದಿನಬಳಕೆ ವಸ್ತುಗಳ ದರ ಏರಿಕೆ – ಕುಟುಂಬಗಳ ಬಜೆಟ್‍ಗೆ ಹೊರೆ :ರಾಜಕುಮಾರ

ದಿನಬಳಕೆ ವಸ್ತುಗಳ ದರ ಏರಿಕೆ – ಕುಟುಂಬಗಳ ಬಜೆಟ್‍ಗೆ ಹೊರೆ :ರಾಜಕುಮಾರ

ಚಿತ್ತಾಪುರ:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ, ಹಾಲು ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ದರ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದ್ದು ಖಂಡನಿಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ತಾಲೂಕ ಅಧ್ಯಕ್ಷ ರಾಜಕುಮಾರ ಯರಗೋಳ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆಯ ಜೊತೆಗೆ ಸಾರಿಗೆ ವೆಚ್ಚವೂ ಹೆಚ್ಚಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಕುಟುಂಬದ ಮಾಸಿಕ ಖರ್ಚು ಹೆಚ್ಚಾಗುತ್ತಿದ್ದು, ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೋಟೆಲ್‍ಗಳು, ಚಹಾ ಅಂಗಡಿಗಳು ಹಾಗೂ ಸಣ್ಣಪುಟ್ಟ ವ್ಯಾಪಾರಗಳ ಮೇಲೂ ಬೆಲೆ ಏರಿಕೆಯ ಪರಿಣಾಮ ಬೀರುತ್ತಿದೆ. ಉತ್ಪಾದನೆ ಮತ್ತು ಸಾಗಣೆ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಕೂಡ ಗ್ರಾಹಕರಿಗೆ ಹೆಚ್ಚಿನ ದರ ವಿಧಿಸುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಕಷ್ಟಪಟ್ಟು ದುಡಿದು ಜೀವನ ಸಾಗಿಸುವ ಸಾಮಾನ್ಯ ಜನರಿಗೆ ಬೆಲೆ ಏರಿಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ರಾಜಕುಮಾರ ಯರಗೋಳ ಒತ್ತಾಯಿಸಿದ್ದಾರೆ.