
ಬೆಂಗಳೂರು, ನ.೨೦- ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಇದೇ ಮೊದಲ ಬಾರಿಗೆ ೧೬ ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ ಪಂಚಾಯಿತಿ ಮಟ್ಟದಲ್ಲಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಮೂಲಸೌಕರ್ಯ ಅಭಿವೃದ್ಧಿಗೆ ೬ ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿಂದು ಗ್ರಾಮೀಣಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ೧೬ ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆಗಳನ್ನು ಒಂದೂವರೆ ವರ್ಷದೊಳಗೆ ಪೂರ್ಣಗೊಳಿಸಬೇಕು. ’ಪ್ರಗತಿ ಪಥ’ ಯೋಜನೆಗೆ ೫ ಸಾವಿರ ಕೋಟಿ ಮೀಸಲಿಡಲಾಗಿದೆ. ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿ ಕೆಲಸ ನಿರ್ವಹಿಸಲು ಅವಕಾಶವಿಲ್ಲ ಎಂದರು.
ಜನರ ಅರ್ಜಿಗಳನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸದೆ, ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಬೇಕು. ಇದಕ್ಕಾಗಿ ‘ಪ್ರಜಾಸೇವೆ’ ವ್ಯವಸ್ಥೆ ಜಾರಿಗೆ ತರಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಬೇಕು. ಬಂದ ಎಲ್ಲ ಅರ್ಜಿಗಳೂ ಸರಿ ಎಂದು ಪರಿಗಣಿಸಬೇಕಿಲ್ಲ; ಅವುಗಳನ್ನು ಪರಿಶೀಲಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು. ಈ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳು ನಿರಂತರವಾಗಿ ನಡೆಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದವರು ಈಗ ಬೇರೆ ರಾಜ್ಯಗಳಲ್ಲೂ ಅವುಗಳನ್ನು ಬೇರೆ ಹೆಸರುಗಳಲ್ಲಿ ಅನುಸರಿಸುತ್ತಿದ್ದಾರೆ. ಮಹಿಳೆಯರಿಗೆ ನೀಡುತ್ತಿರುವ ೨ ಸಾವಿರ ನೆರವು, ಉಚಿತ ವಿದ್ಯುತ್ ಹಾಗೂ ಉಚಿತ ಬಸ್ ಪ್ರಯಾಣದಿಂದ ಜನರಿಗೆ ಅನುಕೂಲವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೂ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಮಹಾತ್ಮ ಗಾಂಧೀಜಿ ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂದಿದ್ದರು. ತಾವು ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಹಾಗೂ ಸ್ವಲ್ಪಕಾಲ ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವವಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸುವುದು ಎಷ್ಟು ಕಷ್ಟ ಎಂಬುದು ತಮಗೆ ತಿಳಿದಿದೆ. ತಾಲೂಕು ಪಂಚಾಯಿತಿಗಳಿಗೆ ಸಾಕಷ್ಟು ಅನುದಾನ ಇಲ್ಲದಿರುವುದರಿಂದ ಗ್ರಾಮಗಳ ಅಭಿವೃದ್ಧಿಗೆ ನಗರ ಪ್ರದೇಶಗಳಿಂದ ಸಂಪನ್ಮೂಲ ತರಬೇಕಾದ ಪರಿಸ್ಥಿತಿಯಿದೆ ಎಂದರು.
ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಜನರು ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಹಳ್ಳಿಗಳಲ್ಲಿ ಬಹುತೇಕ ತಂದೆ-ತಾಯಂದಿರು ಮಾತ್ರ ಉಳಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸುಮಾರು ಶೇ.೭೬ರಷ್ಟು ಜನ ನಗರಗಳತ್ತ ವಲಸೆ ಹೋಗಲಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲೇ ಉತ್ತಮ ಸೌಲಭ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಹೇಳಿದರು.
ಹಾಲಿನ ದರ ಏರಿಕೆ ಕುರಿತು ಬಂದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಹಸು ಸಾಕಣೆ, ಮೇವು ಮತ್ತು ನಿರ್ವಹಣೆಗೆ ರೈತರು ಮಾಡುವ ಖರ್ಚು ಎಲ್ಲರಿಗೂ ತಿಳಿದಿಲ್ಲ. ಅರ್ಧ ಲೀಟರ್ ನೀರಿನ ಬಾಟಲಿಗೆ ೨೫ ನೀಡುವ ಜನರು, ರೈತರಿಗೆ ಹಾಲಿನ ದರ ಹೆಚ್ಚಳದಿಂದ ಸಿಗುವ ಲಾಭವನ್ನೂ ಅರ್ಥಮಾಡಿಕೊಳ್ಳಬೇಕು. ದರ ಏರಿಕೆಯಿಂದ ರೈತರಿಗೆ ಪ್ರತಿ ಲೀಟರ್ಗೆ ಹೆಚ್ಚುವರಿಯಾಗಿ ಏಳೆಂಟು ರೂಪಾಯಿ ದೊರೆಯುತ್ತಿದೆ ಎಂದು ಸಮರ್ಥಿಸಿಕೊಂಡರು.
ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸಲಾಗುತ್ತಿದೆ. ಎತ್ತಿನಹೊಳೆ ಯೋಜನೆಯಡಿ ಮಲೆನಾಡಿನಿಂದ ಬಯಲುಸೀಮೆಗೆ ನೀರು ತರಲಾಗುತ್ತಿದೆ. ವೃಷಭಾವತಿ ನದಿಗೆ ಸೇರುತ್ತಿರುವ ಕಲುಷಿತ ನೀರಿನಿಂದ ಕನಕಪುರ ಭಾಗದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸುವ ಜವಾಬ್ದಾರಿ ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಅಧಿಕಾರಿಗಳ ಮೇಲಿದೆ. ಆರ್ಒ ಘಟಕಗಳ ನಿರ್ವಹಣೆಗೂ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಬಡವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ೧೫ ಲಕ್ಷ ನಿವೇಶನ ಹಂಚಿಕೆಗೆ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳನ್ನು ಹಂಚಲಾಗುವುದು. ನಿವೇಶನಗಳು ಕನಿಷ್ಠ ೩೦x೪೦ ಅಡಿ ಅಳತೆಯಲ್ಲಿರಬೇಕು. ಬಡವರಿಗಾಗಿ ಮನೆ ನಿರ್ಮಿಸುವಾಗಲೇ ಗುಣಮಟ್ಟದ ವಸತಿ ಕಲ್ಪಿಸಬೇಕು; ಹೊಸದಾಗಿ ಕೊಳಚೆ ಪ್ರದೇಶಗಳು ಸೃಷ್ಟಿಯಾಗಲು ಅವಕಾಶ ನೀಡಬಾರದು ಎಂದು ಹೇಳಿದರು.
ಭೂ ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ನಕಲಿ ದಾಖಲೆ ಅಥವಾ ಅಕ್ರಮಗಳಿಗೆ ಅವಕಾಶ ನೀಡಬಾರದು. ಪ್ರತಿಯೊಂದು ತಾಲೂಕಿನಲ್ಲಿ ಇ-ಖಾತಾ ನೀಡುವಾಗ ಆಸ್ತಿಯ ಛಾಯಾಚಿತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡುವುದು ಅತ್ಯಗತ್ಯ. ಪ್ರತಿಯೊಂದು ಕಾಮಗಾರಿ ಆರಂಭಿಸುವ ಮೊದಲು ಮತ್ತು ಪೂರ್ಣಗೊಂಡ ಬಳಿಕ ಫೋಟೊ ಹಾಗೂ ವಿಡಿಯೊ ದಾಖಲಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ಮಾಹಿತಿ ಮತ್ತು ನಿರ್ದೇಶಾಂಕಗಳನ್ನು ದಾಖಲಿಸಬೇಕು. ನಕಲಿ ಬಿಲ್ಗಳಿಗೆ ಅವಕಾಶ ನೀಡಬಾರದು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಅಕ್ರಮ ನಡೆಸುವುದನ್ನು ತಡೆಯಬೇಕು ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಬಿ.ಖಂಡ್ರೆ, ಬಸವಂತಪ್ಪ, ರಾಜ್ಯ ಸರ್ಕಾರದ ದೆಹಲಿಯ ಪ್ರತಿನಿಧಿ ಟಿ.ಬಿ.ಜಯಚಂದ್ರ. ಶಾಸಕರಾದ ಎನ್ ಎಚ್ ಕೋನರೆಡ್ಡಿ, ರಹೀಮ್ ಖಾನ್, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಾದ ಫೌಜಿಯಾ ತರನ್ನಮ್ ಮತ್ತಿತರರು ಉಪಸ್ಥಿತರಿದ್ದರು.
























