
ಬೀದರ್, ಜು. ೮: ಹಿರಿಯ ನಾಗರಿಕರು ಆರೋಗ್ಯಕರ ಹಾಗೂ ನೆಮ್ಮದಿಯ ಜೀವನ ನಡೆಸಲು ಭಜನೆ, ಸಂಗೀತ, ಕೀರ್ತನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಬೇಕು. ಸದಾ ನಗುನಗುತ್ತಾ, ಚಿಂತೆಯಿಲ್ಲದೆ ಚಿಂತನಶೀಲ ಜೀವನ ನಡೆಸಬೇಕು ಎಂದು ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಮಾಣಿಕ ನೇಳಗೆ ಸಲಹೆ ನೀಡಿದರು.
ಕರ್ನಾಟಕ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಜನಜನಿತ ಕಲಾ ಪ್ರದರ್ಶನ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಅರಿವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನ ಸುಭಾಷ ಮಾತನಾಡಿ, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಗುರುತಿನ ಚೀಟಿ ನೀಡುವ ವ್ಯವಸ್ಥೆ ಇದ್ದು, ಪ್ರತಿಯೊಬ್ಬರೂ ಗುರುತಿನ ಚೀಟಿ ಪಡೆದು ಅದರ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಕುಚಬಾಳ ನಿರೂಪಣೆ ಮಾಡಿದರು. ಜಂಟಿ ಕಾರ್ಯದರ್ಶಿ ಎಂ.ಡಿ. ರಶೀದ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ದೇವೆಂದ್ರ ಡಿಗ್ಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಪ್ರಭಾಕರ ಸೋನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ನಾಗಪ್ಪ ಜಂಬಗಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ದತ್ತಾತ್ರೇ ಕುಲಕರ್ಣಿ ಅವರ ದೀರ್ಘಕಾಲದ ಸೇವೆಯನ್ನು ಗುರುತಿಸಿ ವಿಶೇಷ ಸನ್ಮಾನ ಮಾಡಲಾಯಿತು. ಅವರಿಗೆ ‘ದಾನರತ್ನ ದಯಾಮಣಿ’ ಬಿರುದು ನೀಡಿ ಗೌರವ ಪ್ರಮಾಣಪತ್ರ ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ನಿವೃತ್ತ ನೌಕರರು ಹಾಗೂ ಹಿರಿಯ ನಾಗರಿಕರು ಭಾಗವಹಿಸಿದ್ದರು. ಕೊನೆಯಲ್ಲಿ ಶೇಷರಾವ ಬಿರಾದಾರ ವಂದಿಸಿದರು.




























