Home ಜಿಲ್ಲೆ ಬೆಂಗಳೂರು ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ; ಸುಧಾಕರ್

ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ; ಸುಧಾಕರ್

ಶಿಡ್ಲಘಟ್ಟ,ಅ. ೧೩: ಮುಂಬರುವ ತಾಲೂಕು ಪಂಚಾಯಿತಿ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖಂಡರು ಹಾಗೂ ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್ ಕರೆ ನೀಡಿದರು.


ತಾಲೂಕಿನ ಹಂಡಿಗನಾಳ ಗ್ರಾಮದ ಮಾಜಿ ಸಚಿವ ವಿ. ಮುನಿಯಪ್ಪ ಸ್ವಗೃಹದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಪದವೀಧರರ ಅಭ್ಯರ್ಥಿ ಗೆಲುವಿನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.


ಅಕ್ಟೋಬರ್ ೨೩ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರಿಗೆ ಪದವೀಧರರು ಬೆಂಬಲ ನೀಡುವ ಮೂಲಕ ಗೆಲುವಿಗೆ ಸಹಕರಿಸಬೇಕು. ಕಾಂಗ್ರೆಸ್ ಸರ್ಕಾರವು ಪದವೀಧರರು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕು ಎಂದು ಮನವಿ ಮಾಡಿದರು.


ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ವಿ. ಮುನಿಯಪ್ಪ ಮಾತನಾಡಿ ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಗಮನ ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸುವುದರ ಮೇಲಿದೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯವಾಗಿದ್ದು ೨೦೨೮ ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ರಾಜ್ಯದ ಹೈ ಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ ಎಂದರು.


ಕಾಂಗ್ರೆಸ್ ಮುಖಂಡ ಪುಟ್ಟು ಅಂಜಿನಪ್ಪ ಮಾತನಾಡಿ ಬಶೆಟ್ಟಹಳ್ಳಿ, ದಿಬ್ಬೂರಹಳ್ಳಿ, ಜಂಗಮಕೋಟೆ ಸೇರಿದಂತೆ ಶಿಡ್ಲಘಟ್ಟ ತಾಲೂಕಿನಾದ್ಯಂತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಪದವೀಧರರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗುವ ವಿಶ್ವಾಸವಿದೆ ಎಂದರು.


ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ, ಶ್ರೀನಿವಾಸ ರಾಮಯ್ಯ, ಸುಬ್ರಮಣಿ, ನಿರಂಜನ್, ನಾಗರಾಜ್, ರಾಜಕುಮಾರ್, ಗೌಡನಹಳ್ಳಿ ಮಂಜುನಾಥ್, ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.