
ಕಲಬುರಗಿ,ಜೂ.21-ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿದೆ.
ರಜಾಕ್ ತಂದೆ ಮಹೆಬೂಬ್ ಸಾಬಶೇಖ್ (20) ಶಿಕ್ಷೆಗೆ ಗುರಿಯಾದ ಆರೋಪಿ.
ಈತ ಅಪ್ರಾಪ್ತ ಬಾಲಕಿಯನ್ನು ಮದುವೆಯಾವುದಾಗಿ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಸಬ್-ಅರ್ಬನ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತ ಡಿ.ಜಿ.ರಾಜಣ್ಣ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆ ಅಡಿಯಲ್ಲಿ ನ್ಯಾಯಾ¯ಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ್ ಸಿ.ಜಿ.ಅವರು ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ.ದಂಡ ವಿಧಿಸಿದ್ದಾರೆ.
ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ 5 ಲಕ್ಷ ರೂಪಾಯಿಗಳನ್ನು ತೀರ್ಪಿನ ದಿನಾಂಕದಿಂದ 1 ತಿಂಗಳ ಅವಧಿಯೊಳಗೆ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು.


























