
ಕಲಬುರಗಿ,ಏ.1-ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು 2.50 ಲಕ್ಷ ದಂಡ ವಿಧಿಸಿದೆ.
ಭೀಮಾಶಂಕರ ತಂದೆ ದಶರಥ ಹಕ್ಕಿ (28) ಶಿಕ್ಷೆಗೆ ಗುರಿಯಾದ ಆರೋಪಿ.
ಆರೋಪಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು. ಪಿಐ ಸುಶೀಲಕುಮಾರ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ಬಿಎನ್‍ಎಸ್ ಮತ್ತು ಪೊಕ್ಸೋ ಕಾಯ್ದೆ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ.ಅವರು ಪೊಕ್ಸೋ ಕಾಯ್ದೆ ಅಡಿಯಲ್ಲಿ ಅಪರಾಧಕ್ಕೆ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 2.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ತೀರ್ಪಿನ ದಿನಾಂಕದಿಂದ 1 ತಿಂಗಳ ಅವಧಿಯೊಳಗೆ ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ 3 ಲಕ್ಷ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.




























