
ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ, ಕಾಡು ಪ್ರಾಣಿಗಳಿಂದ ಬೆಳೆ ಹಾಗೂ ಜಾನುವಾರು ಹಾನಿಗೊಳಗಾದ ರೈತರಿಗೆ ಶೀಘ್ರವಾಗಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಅರಣ್ಯ ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.
ಬೀದರ್ ಜಿಲ್ಲೆಗೆ ಆಗಮಿಸಿದ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕರು.
ಕ್ಷೇತ್ರದ ಅಮಲಾಪುರ-ಮನ್ನಳ್ಳಿ ರಸ್ತೆ ಹಾಗೂ ಬೆಳ್ಳೂರ ಗ್ರಾಮದ ಮುಖ್ಯ ದ್ವಾರದಿಂದ ಕಮಠಾಣಾ ಗ್ರಾಮಕ್ಕೆ ತೆರಳುವ ರಸ್ತೆಗಳ ಕೆಲವು ಭಾಗಗಳು ದಟ್ಟ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುತ್ತಿವೆ. ಈ ಮಾರ್ಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಹಂದಿ, ಜಿಂಕೆ, ಕೃಷ್ಣಮೃಗ, ಮಂಗ ಸೇರಿದಂತೆ ವಿವಿಧ ಕಾಡು ಪ್ರಾಣಿಗಳ ಓಡಾಟ ಹೆಚ್ಚಾಗಿದೆ. ವಿಶೇಷವಾಗಿ ರಾತ್ರಿ ವೇಳೆ ಪ್ರಾಣಿಗಳು ಏಕಾಏಕಿ ರಸ್ತೆ ದಾಟುತ್ತಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಡು ಪ್ರಾಣಿಗಳಿಂದ ಉಂಟಾಗುತ್ತಿರುವ ಅಪಘಾತದ ಅಪಾಯವನ್ನು ಕಡಿಮೆ ಮಾಡಲು, ಅಮಲಾಪುರ-ಮನ್ನಳ್ಳಿ ಹಾಗೂ ಬೆಳ್ಳೂರ-ಕಮಠಾಣಾ ರಸ್ತೆಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಎರಡೂ ಬದಿಗಳಲ್ಲಿ ಸೂಕ್ತ ಗುಣಮಟ್ಟದ ತಂತಿ ಬೇಲಿ ನಿರ್ಮಿಸಬೇಕು ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಡು ಪ್ರಾಣಿಗಳ ಓಡಾಟ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಅಗತ್ಯವಾದ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು. ತಂತಿ ಬೇಲಿ ನಿರ್ಮಾಣದಿಂದ ಕಾಡು ಪ್ರಾಣಿಗಳು ರಸ್ತೆಗೆ ಪ್ರವೇಶಿಸುವುದನ್ನು ನಿಯಂತ್ರಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ರೈತರಿಗೆ ಭಾರೀ ಆರ್ಥಿಕ ನಷ್ಟವಾಗುತ್ತಿದೆ. ಜಾನುವಾರುಗಳಿಗೂ ಹಾನಿಯಾಗುತ್ತಿರುವ ಘಟನೆಗಳು ನಡೆಯುತ್ತಿದ್ದು, ಗ್ರಾಮೀಣ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ನಿಯಮಿತ ಗಸ್ತು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು. ಈಗಾಗಲೇ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ, ಜಾನುವಾರು ಹಾಗೂ ಇತರೆ ರೀತಿಯಲ್ಲಿ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ನೀಡಬೇಕಾದ ಪರಿಹಾರವನ್ನು ತ್ವರಿತವಾಗಿ ಮಂಜೂರು ಮಾಡಿ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಅರಣ್ಯ ಸಚಿವರಿಗೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಹುಮನಾಬಾದ ಶಾಸಕರಾದ ಸಿದ್ದು ಪಾಟೀಲ್, ಬೀದರ್ ಮಂಡಲ ಅಧ್ಯಕ್ಷರಾದ ಗುರುನಾಥ ರಾಜಗೀರ, ಮುಖಂಡರಾದ ಸುರೇಶ್ ಮಾಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಸಂಜುಕುಮಾರ ಕೋಳಿ, ಸಂತೋಷ ರೆಡ್ಡಿ ಇತರರು ಉಪಸ್ಥಿತರಿದ್ದರು.






























