ಶಕ್ತಿ ಯೋಜನೆ “ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆ

ತುಮಕೂರುಅ.೧೧: ಪಂಚ ಗ್ಯಾರಂಟಿ ಯೋಜನೆಗಳಿಂದ ತುಮಕೂರು ಜಿಲ್ಲೆಗೆ ಇದುವರೆಗೂ ೪೭೦೧.೮೮ ಕೋಟಿ ರೂ. ಹಣವನ್ನು ಸರ್ಕಾರ ವ್ಯಯಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ದೇಶ, ವಿದೇಶದಲ್ಲೂ ಚರ್ಚೆಯಾಗುತ್ತಿವೆ. ಶಕ್ತಿ ಯೋಜನೆ “ಗೋಲ್ಡನ್ ಬುಕ್ ಆಫ್ ರೆಕಾರ್ಡ್” ಗೆ ಸೇರ್ಪಡೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.


ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಚುನಾವಣೆ ಗೆಲುವಿಗಾಗಿ ಮಾಡಿದ ಯೋಜನೆಗಳಲ್ಲ. ಜನರ ಜೀವನಮಟ್ಟ ಸುಧಾರಣೆಗೆ ೨೦೨೩ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಮ್ಮ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿದ ಸಂಕಲ್ಪವನ್ನು ಜಾರಿಗೆ ತಂದಿದ್ದಾರೆ. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದರು.


ಗ್ಯಾರಂಟಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಫಲಾನುಭವಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಯೋಜನೆಯ ದುರುಪಯೋಗ ಆಗದಂತೆ ಎಲ್ಲೂ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದರು.


ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ತಲಾದಾಯ ಹೆಚ್ಚಳವಾಗಿದೆ. ೨೦೧೩ರಲ್ಲಿ ೧.೦೫ ಲಕ್ಷವಿದ್ದ ತಲಾದಾಯ ಈಗ ೨.೦೪ ಲಕ್ಷಕ್ಕೆ ತಲುಪಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆ ಸಾಕಷ್ಟಿದೆ. ಇನ್ನೂ ೨೦೦ ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದರ ಜೊತೆಗೆ ರಾಜ್ಯದ ೩೩ ಲಕ್ಷ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ ರೈತರ ನೆರವಿಗೂ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದರು.


ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯಲ್ಲಿರುವ ೩೩೦ ಗ್ರಾಮ ಪಂಚಾಯತಿ ಹಾಗೂ ೪ ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿ ಪ್ರಚಾರ ಮಾಡಬೇಕಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಕಳೆದ ೨೧ ತಿಂಗಳಲ್ಲಿ ೯೮ ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಲಾಗಿದೆ ಎಂದು ಹೇಳಿದರು.


ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರಗೌಡ, ಉಪಾಧ್ಯಕ್ಷರುಗಳಾದ ಹನುಮಂತಯ್ಯ, ನರಸೀಯಪ್ಪ, ಅಂಬರೀಶ್, ಶಿವಪ್ರಸಾದ್, ಪಂಚಾಕ್ಷರಿ ಹಾಗೂ ಪ್ರಾಧಿಕಾರದ ಸದಸ್ಯರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಐಟಿ, ಎನ್ ಪಿಸಿಐ ಸಮಸ್ಯೆ ಬಗೆಹರಿಸಿ: ಸಿಇಒ ಪ್ರಭು ಸೂಚನೆ
ಅನ್ನಭಾಗ್ಯ ಯೋಜನೆಯಡಿ ಪಡೆದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ತಡೆಹಾಕಬೇಕು. ಗೋದಾಮುಗಳಲ್ಲಿ ದಾಸ್ತಾನು ಅಚ್ಚುಕಟ್ಟಾಗಿ ಇಡಬೇಕು.

ತೂಕದಲ್ಲಿ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಸ್ ಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ಪೈಕಿ ಐಟಿ/ಜಿಎಸ್ ಟಿಯಿಂದ ೭೩೪೩ ಎನ್ ಪಿಸಿಐ ನಿಂದ ೨೯೩೩ ಫಲಾನುಭವಿಗಳು ಯೋಜನೆಯಿಂದ ಹೊರಗುಳಿದಿದ್ದಾರೆ. ಇದನ್ನು ಸರಿಪಡಿಸುವ ಕಾರ್ಯ ಆಗಬೇಕು ಎಂದರು.