
ಕೋಲಾರ,ನ,೨೬-ಬಾಲ್ಯ ವಿವಾಹ ಪ್ರಕರಣಗಳ ಕಡಿವಾಣಕ್ಕೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮಹಿಳೆಯರ ಮೇಲಾಗುತ್ತಿರುವ ಕೌಟುಂಬಿಕ ಹಿಂಸೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ತಳಮಟ್ಟದಲ್ಲಿ ಸಾಂತ್ವನ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದ್ದಾರೆ. ಈ ಕುರಿತು ಎಲ್ಲ ಇಲಾಖೆಗಳು ಇನ್ನಷ್ಟೂ ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯತ್ ಹಂತದಲ್ಲಿ ಕಾವಲು ಸಮಿತಿಗಳಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಮಕ್ಕಳ ಅಪಹರಣಗಳು, ಪೋಕ್ಸೋ, ಬಾಲ್ಯ ವಿವಾಹ ಹಾಗೂ ವಿವಾಹೇತರ ಸಂಬಂಧಗಳಂತಹ ಪ್ರಕರಣಗಳು ಕಳ್ಳಸಾಗಾಣಿಕೆಯೊಂದಿಗೆ ಸಹ ಸಂಬಂಧ ಹೊಂದಿರುವುದರಿಂದ ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಪ್ರದೇಶಗಳನ್ನು ಗುರುತಿಸಿ ರಕ್ಷಣೆಗೆ ಕ್ರಮ ವಹಿಸಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಒಟ್ಟು ೫೭ ಪ್ರಕರಣಗಳು ದಾಖಲಾಗಿದ್ದು ೪೦ ಪ್ರಕರಣಗಳನ್ನು ಡಿಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ನ್ಯಾಯಾಲಯದಿಂದ ೭ ಪ್ರಕರಣ ಇತ್ಯರ್ಥವಾಗಿದೆ ಮತ್ತು ೧೦ ಪ್ರಕರಣಗಳು ಸಂರಕ್ಷಣಾಧಿಕಾರಿ ಅವರಿಂದ ಇತ್ಯರ್ಥವಾಗಿದೆ ಒಟ್ಟು ೧೭ ಪ್ರಕರಣಗಳು ಇತ್ಯರ್ಥವಾಗಿದ್ದು, ೪೦ ಪ್ರಕರಣಗಳು ಬಾಕಿ ಉಳಿದಿದೆ.
ರಾಜ್ಯ ಲಿಂಗಾನುಪಾತವು ಜಿಲ್ಲಾ ಲಿಂಗಾನುಪಾತಕ್ಕಿಂತ ಹೆಚ್ಚುವರಿ ಆಗಿದೆ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಗಣನೀಯ ಕಡಿಮೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ ಎಂದರು.
ಯಾವುದೇ ಕಾರಣಕ್ಕೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯಾಗದಂತೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕುಸ ಹಾಗೂ ಪ್ರತಿ ತಿಂಗಳು ಈ ಕುರಿತು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳಿಂದಾಗಿ ಯುವತಿಯರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಪೋಕ್ಸೋ ಪ್ರಕರಣಗಳು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಾಗೂ ಕಾರ್ಯಾಗಾರಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಬೇಕು.
ಸ್ಥಾನಿಕವಾಗಿ ಭೇಟಿ ನೀಡಿ ಫಲಾನುಭವಿಗಳ ಸರ್ವೆ ಮಾಡಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ. ನಾರಾಯಣಸ್ವಾಮಿ, ಜಿಲ್ಲಾ ನಿರೂಪಣಾಧಿಕಾರಿ ನಾಗರತ್ನ, ಜಿಲ್ಲಾ ಆರೋಗ್ಯ್ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ವಿವಿಧ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.




























