ಬೆಂಗಳೂರು, ಜು.೩: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಬಿಎಲ್‌ಒಗಳು ಮನೆಗಳಿಗೆ ಭೇಟಿ ನೀಡದೆ ಒಂದೇ ಸ್ಥಳದಲ್ಲಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಬಿಎಲ್‌ಒಗಳು ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಬೇಕು. ಕಚೇರಿಗಳಿಂದ ಅಥವಾ ಒಂದೇ ಸ್ಥಳದಲ್ಲಿ ನಮೂನೆಗಳನ್ನು ವಿತರಿಸುವುದು ನಿಯಮಬಾಹಿರವಾಗಿದ್ದು, ಇಂತಹ ಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.
SIಖ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲೂ ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಲಾಗಿದೆ.
ಇದೇ ವೇಳೆ, ಗಣತಿ ನಮೂನೆಗಳನ್ನು ಭರ್ತಿ ಮಾಡಲು ಕಷ್ಟಪಡುವ ಮತದಾರರಿಗೆ ಅಗತ್ಯ ನೆರವು ಒದಗಿಸಲು ಮತದಾರರ ಸೌಲಭ್ಯ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಪಾರದರ್ಶಕ ಹಾಗೂ ನಿಯಮಾನುಸಾರ ನಡೆಯುವಂತೆ ಎಲ್ಲಾ ಬಿಎಲ್‌ಒಗಳು ಕಾರ್ಯನಿರ್ವಹಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.






























