
ಬೆಂಗಳೂರು.ಅ.೩೦ – ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್ ಅವರನ್ನು ಬದಲಾಯಿಸಿ, ಅವರ ಜಾಗಕ್ಕೆ ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
ಎಸ್ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್.ಶಶಿಕುಮಾರ್ ವೈಯಕ್ತಿಕ ಕಾರಣಗಳಿಂದಾಗಿ ತಮ್ಮನ್ನು ತನಿಖಾ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ (ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ) ಪತ್ರ ಬರೆದು ಮನವಿ ಸಲ್ಲಿಸಿದ್ದರು.ಅವರ ಮನವಿಯನ್ನು ಪುರಸ್ಕರಿಸಿ, ಸರ್ಕಾರವು ಈಗ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಹೊಸ ಮುಖ್ಯಸ್ಥರನ್ನಾಗಿ ನೇಮಿಸಿದೆ.
ಎಸ್ಐಟಿತಂಡದಲ್ಲಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸನ್ನರನ್ನೂ ಸಹ ಬದಲಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಹೊಸ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಶಶಿಕುಮಾರ್ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರಿಂದ ಮತ್ತು ಸ್ಥಳೀಯವಾಗಿ ಪ್ರಭಾವ ಹೊಂದಿರುವವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಮಾಡಿ, ನಿಷ್ಪಕ್ಷಪಾತ ತನಿಖೆಗಾಗಿ ಎಸ್ಐಟಿ ಮುಖ್ಯಸ್ಥರಾಗಿ ಐಜಿಪಿ ಶಶಿಕುಮಾರ್ ಅವರನ್ನು ಬದಲಾಯಿಸುವಂತೆ ಸೌಜನ್ಯಾ ಪೋಷಕರು ಹಾಗೂ ಕೆಲವು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದವು.
ಈ ಬೆಳವಣಿಗೆಗಳ ಮಧ್ಯೆಯೇ ಐಜಿಪಿ ಶಶಿಕುಮಾರ್ ವೈಯಕ್ತಿಕ ಕಾರಣಗಳಿಂದಾಗಿ ತಮ್ಮನ್ನು ತನಿಖಾ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದು ತಾವಾಗಿಯೇ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.

























