
ಬೀದರ್:ಫೆ.8: ಜಿಲ್ಲಾ ಪಂಚಾಯಿತಿ ಬೀದರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ಜಲ್ ಜೀವನ ಮಿಷನ್ (ಜೆಜೆಎಂ) ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾ) ಸಹಯೋಗದಲ್ಲಿ, ಲಾಲ್ ಬಹದ್ದೂರ್ ಶಿಕ್ಷಣ ಸಂಸ್ಥೆ ಬೀದರ್ (ಅನುಷ್ಠಾನ ಬೆಂಬಲ ಸಂಸ್ಥೆ) ಅವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ವಿಶೇಷ ಅಭಿಯಾನ ಆರಂಭಿಸಲಾಗಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಕುಡಿಯುವ ನೀರಿನ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ನೀರಿನ ಗುಣಮಟ್ಟವನ್ನು ಪರಿಶೀಲಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ ಈ ಅಭಿಯಾನವು ಫೆಬ್ರವರಿ 02-02-2026 ರಿಂದ 13-02-2026ರವರೆಗೆ ನಡೆಯಲಿದ್ದು, ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲಾ ನೀರಿನ ಮಾದರಿಗಳನ್ನು ಈieಟಜ ಖಿesಣ ಏiಣs ಹಾಗೂ ಊ2S ಗಿiಚಿಟsಗಳ ಮೂಲಕ ಪರೀಕ್ಷಿಸಲಾಗುತ್ತಿದೆ.
ನೀರಿನಲ್ಲಿ ಬ್ಯಾಕ್ಟೀರಿಯಾ ಸೇರಿದಂತೆ ವಿವಿಧ ಮಾಲಿನ್ಯಗಳ ಅಂಶಗಳಿರುವುದನ್ನು ಪತ್ತೆಹಚ್ಚುವ ಉದ್ದೇಶದಿಂದ ಈ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದ್ದು, ಸುರಕ್ಷಿತ ಕುಡಿಯುವ ನೀರು ಪೂರೈಕೆಗೆ ಈ ಕ್ರಮವು ಸಹಕಾರಿಯಾಗಲಿದೆ. ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಸ್ವಾಮಿ ಕೊಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



























