Home ಜಿಲ್ಲೆ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ

ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ

ಮುದ್ದೇಬಿಹಾಳ: ಕರ್ನಾಟಕ ಮಾಧ್ಯಮ ಒಕ್ಕೂಟ(ರಿ.) ಸಂಘಟನೆಯ ವತಿಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ ೨೫ರಂದು ನಡೆಯಲಿರುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದ ಇಬ್ಬರು ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ನೆರವೇರಿಸಲಾಗುತ್ತಿದೆ.
ಪತ್ರಕರ್ತ ದಿ. ನಾಗರಾಜ ಬಿ. ಜಮಖಂಡಿ ಅವರ ಸ್ಮರಣಾರ್ಥ ಆಯೋಜಿಸಿರುವ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ, ಮಾಧ್ಯಮ ರತ್ನ ಹಾಗೂ ಮಾಧ್ಯಮ ಸಾಧಕ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಸಾಧನೆಗೈದ ವಿದ್ಯಾರ್ಥಿಗಳಾದ ಕುಮಾರ ವಿಕ್ರಾಂತ ಶಾರದಳ್ಳಿ(ಸ್ಕೇಟಿಂಗ್) ಹಾಗೂ ಕುಮಾರಿ ಶಕುಂತಲಾ ಶಾರದಳ್ಳಿ(ಕರಾಟೆ) ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುತ್ತಿದೆ.
ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧಿಸಿರುವ ಸಾಧನೆಯನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಗೌರವಕ್ಕೆ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದ್ದು ಇಂತಹ ಸನ್ಮಾನಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ಬೆಳೆಸಲು ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡಲಿವೆ.
ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಿರುವ ಕರ್ನಾಟಕ ಮಾಧ್ಯಮ ಒಕ್ಕೂಟದ ಪದಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು, ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿ ವತಿಯಿಂದಲೂ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಗಿದೆ.
ಕ್ರೀಡಾ ಸಾಧಕರನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಮಾಜದಲ್ಲಿ ಕ್ರೀಡೆಯ ಮಹತ್ವವನ್ನು ಹೆಚ್ಚಿಸಲು ಸಹಕಾರಿಯಾಗಲಿವೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.