Home ಜಿಲ್ಲೆ ಆ.೧೬ರಂದು ವಿಶೇಷ ಉಪನ್ಯಾಸ, ಪ್ರತಿಭಾ ಪುರಸ್ಕಾರಜಿಲ್ಲಾ ಮಟ್ಟದಲ್ಲಿ ರ‍್ಯಾಂಕ್ ಪಡೆದ ೯೦ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಆ.೧೬ರಂದು ವಿಶೇಷ ಉಪನ್ಯಾಸ, ಪ್ರತಿಭಾ ಪುರಸ್ಕಾರಜಿಲ್ಲಾ ಮಟ್ಟದಲ್ಲಿ ರ‍್ಯಾಂಕ್ ಪಡೆದ ೯೦ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಯಾದಗಿರಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.), ಬೆಂಗಳೂರು, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.೧೬ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಚಿತ್ತಾಪುರ ರಸ್ತೆಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ರವೀಂದ್ರನಾಥ ಎಸ್. ಹೊಸ್ಮನಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ ಉಪಸ್ಥಿತರಿರುವರು. ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ ಹಾಗೂ ರಾಜ್ಯಾಧ್ಯಕ್ಷ ನಿಂಗೇಗೌಡ ಎ.ಎಚ್. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವು ವಹಿಸಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುದೀಪ್ ಟಿ.ಸಿ., ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ರುದ್ರಗೌಡ ಮಾಲಿಪಾಟೀಲ, ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶರಣಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಹುಡೇದ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಸಂಘದ ಕಾರ್ಯದರ್ಶಿ ಭೀಮಪ್ಪ ಎಚ್. ಗೊಲ್ಲರ, ಕಲಬುರಗಿ ಜಿಲ್ಲಾಧ್ಯಕ್ಷ ಎನ್.ಬಿ. ರಂಗೋಲಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅರಳಹಳ್ಳಿ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಯಾದಗಿರಿ ತಾಲೂಕು ಅಧ್ಯಕ್ಷ ಸಾಬಯ್ಯ ಕವಲ್ದಾರ, ಶಹಾಪುರ ಅಧ್ಯಕ್ಷ ಬಿ.ಆರ್. ಅಂಚೆಸೂಗೂರು, ಸುರಪುರ ಅಧ್ಯಕ್ಷ ಮೋನಯ್ಯ ಗೋನಾಲ, ಗುರುಮಠಕಲ್ ಅಧ್ಯಕ್ಷ ದೇವೇಂದ್ರಪ್ಪ ಚಂಡ್ರಿಕಿ, ಹುಣಸಗಿ ಅಧ್ಯಕ್ಷ ಲಕ್ಷ್ಮಣ ರಾಠೋಡ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿ ಹಾಗೂ ಸಮಾಜ ಕುರಿತು ವಿಶೇಷ ಉಪನ್ಯಾಸ

ಬೆಂಗಳೂರಿನ ಅಕ್ಕ ಅಕಾಡೆಮಿಯ ಮುಖ್ಯಸ್ಥ ಡಾ. ಶಿವಕುಮಾರ ಅವರು ‘ವಿದ್ಯಾರ್ಥಿ ಹಾಗೂ ಸಮಾಜ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ರವೀಂದ್ರನಾಥ ಎಸ್. ಹೊಸ್ಮನಿ ಮನವಿ ಮಾಡಿದರು.

೯೦ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

೨೦೨೬ರ ದ್ವಿತೀಯ ಪಿಯುಸಿ ಪರೀಕ್ಷೆ-೧ರಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಜಿಲ್ಲಾ ಮಟ್ಟದಲ್ಲಿ ರ‍್ಯಾಂಕ್ ಪಡೆದ ೯೦ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ೨೦೨೬-೩೧ನೇ ಅವಧಿಗೆ ಆಯ್ಕೆಯಾಗಿರುವ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ವೈಯಕ್ತಿಕವಾಗಿ ಶೇ.೧೦೦ರಷ್ಟು ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾದ ಉಪನ್ಯಾಸಕರನ್ನೂ ಸನ್ಮಾನಿಸಿ ಗೌರವಿಸಲಾಗುವುದು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವುದು, ಪ್ರತಿಭಾವಂತರನ್ನು ಗುರುತಿಸುವುದು ಹಾಗೂ ಉತ್ತಮ ಫಲಿತಾಂಶ ನೀಡಿದ ಉಪನ್ಯಾಸಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರವೀಂದ್ರ ಗುತ್ತೇದಾರ, ಸಾಬಯ್ಯ ಕವಲ್ದಾರ, ಭೀಮಣ್ಣ ಅಂಚೆಸೂಗೂರು ಹಾಗೂ ಭೀಮಾಶಂಕರ ದೊಡ್ಮನಿ ಉಪಸ್ಥಿತರಿದ್ದರು.