
ಸಂಜೆ ವಾಣಿ ವಾರ್ತೆ
ಜಮಖಂಡಿ: ಏ.೮:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಜಮಖಂಡಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ “ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನದಲ್ಲಿ ಭವಿಷ್ಯದ ವೃತ್ತಿ ಅವಕಾಶಗಳು” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟೆಯ ಡಾ. ಭಾಗೀರತಿ ಹಲಳ್ಳಿ ಅವರು ಭಾಗವಹಿಸಿ ಕೃತಕ ಬುದ್ಧಿಮತ್ತೆಯ ಇತ್ತೀಚಿನ ಬೆಳವಣಿಗೆಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಉಪನ್ಯಾಸ ನೀಡಿದರು. ಅವರು ನ್ಯೂರಲ್ ನೆಟ್ವರ್ಕ್, ಡೀಪ್ ಲರ್ನಿಂಗ್ ಹಾಗೂ ಜನರೇಟಿವ್ ಎಐ ಕುರಿತು ವಿವರಿಸಿ, ಚಿತ್ರ ಸಂಸ್ಕರಣೆ, ವೀಡಿಯೋ ವಿಶ್ಲೇಷಣೆ ಮತ್ತು ಧ್ವನಿ ಆಧಾರಿತ ವ್ಯವಸ್ಥೆಗಳಲ್ಲಿ ಎಐ ಉಪಯೋಗಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುನಂದ ಶಿರೂರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ಡಾ. ವಿ.ಆರ್. ದಲವಾಯಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ಮುತ್ತಪ್ಪ ಮಂಟೂರ ಉಪಸ್ಥಿತರಿದ್ದರು.
ಈ ವೇಳೆ ಡಾ. ಮುತ್ತಪ್ಪ ಮಂಟೂರ ಅವರು ತಾಂತ್ರಿಕ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳಲ್ಲಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ಡಾ. ಸುನಂದ ಶಿರೂರು ಅವರು ವಿದ್ಯಾರ್ಥಿಗಳು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ನವೀಕರಿಸಿಕೊಂಡು ತಮ್ಮ ಭವಿಷ್ಯವನ್ನು ದೃಢಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿ, ಪ್ರಶ್ನೋತ್ತರ ಅವಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕೊನೆಯಲ್ಲಿ ಕೃತಜ್ಞತಾ ಸಮರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.


















