
ಬೀದರ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮಾತ್ರವಲ್ಲದೆ, ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ತೀರಾ ಅಗತ್ಯವಾಗಿವೆ ಎಂದು ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ ಹೇಳಿದರು.
ರವಿವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಸಿ.ಎಂ. ಕಪ್ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ನಮಗೆ ಕಲಿಸಿಕೊಡುತ್ತದೆ. ಗೆಲುವಿನಿಂದ ಅಹಂಕಾರ ಪಡದೆ, ಸೋಲಿನಿಂದ ಕಲಿಯುವ ಮೂಲಕ ಮುಂದಿನ ಹಂತಕ್ಕೆ ಬೆಳೆಯಬೇಕು. ಕ್ರೀಡಾಂಗಣದಲ್ಲಿ ತೋರುವ ಕ್ರೀಡಾಸ್ಪೂರ್ತಿ ಮತ್ತು ಶಿಸ್ತು ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ನಮಗೆ ಮಾರ್ಗದರ್ಶಿಯಾಗಲಿದೆ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರದ ಅಧ್ಯಕ್ಷತೆ ವಹಿಸಿದ ಮಾಜಿ ಸಚಿವರು ಹಾಗೂ ಬೀದರ ಉತ್ತರ ಕ್ಷೇತ್ರದ ಶಾಸಕರಾದ ರಹೀಂ ಖಾನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ತರಬೇತಿ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ನೆಹರು ಕ್ರೀಡಾಂಗಣದ ಅಭಿವೃದ್ಧಿ ಹಾಗೂ ಜಿಲ್ಲೆಯ ಕ್ರೀಡಾಪಟುಗಳಿಗೆ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಿ.ಎಂ. ಕಪ್ ಕ್ರೀಡಾಕೂಟವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿಯೂ ಅದ್ಭುತ ಸಾಮರ್ಥ್ಯ ಅಡಗಿರುತ್ತದೆ, ಅದನ್ನು ಹೊರತಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇಂತಹ ಕ್ರೀಡಾಕೂಟಗಳು ಸುವರ್ಣ ಅವಕಾಶವನ್ನು ಒದಗಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಯುವಜನತೆ ಮಾದಕ ದ್ರವ್ಯ ಹಾಗೂ ಅನಗತ್ಯ ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಇಂತಹ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ.
ಈ ಜಿಲ್ಲಾ ಮಟ್ಟದ ಸಿ.ಎಂ. ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಸ್ಪರ್ಧಿಗಳಿಗೆ ಶುಭ ಹಾರೈಸಿದ ಅವರು, ಬೀದರ್ ಜಿಲ್ಲೆಯ ಹೆಸರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳಗುವಂತೆ ಅತ್ಯುತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಅಮೃತರಾವ ಚಿಮ್ಮಕೊಡೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ ಅಪ್ಪೆ, ಮಾಜಿ ಎಂ.ಎಲ್.ಸಿ ಅರವಿಂದ ಕುಮಾರ ಅರಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಾಲರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ, ಬಾಬು ವಾಲಿ ಸೇರಿದಂತೆ ವಿವಿಧ ಭಾಗದ ಕ್ರೀಡಾಪಟುಗಳು ಭಾಗವಹಿಸಿದ್ದರು.































