
ಬೆಂಗಳೂರು, ಮಾ. ೧೮- ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವೆಂದೇ ಬಿಂಬಿಸಲಾಗಿರುವ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಇಂದು ರಾಜ್ಯಾದ್ಯಂತ ಸುಸೂತ್ರವಾಗಿ ನಡೆಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೮,೬೫,೯೮೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ನಕಲು ತಡೆಗೆ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ಪರೀಕ್ಷಾ ಕೇಂದ್ರ ಸುತ್ತ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೧೫ ರವರೆಗೆ ಪರೀಕ್ಷೆ ನಡೆಯಿತು. ೭,೭೫,೯೭೯ ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ೬೨,೯೩೮ ವಿದ್ಯಾರ್ಥಿಗಳು ಪುನಾರರ್ವತಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ೨,೮೭೦ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆ ನಡೆಯುವ ದಿನದಿಂದ ಮುಗಿಯುವತನಕ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀಟರ್ ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷೆ ಕೇಂದ್ರ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಅಂಗಡಿಗಳು ಬಂದ್ ಮಾಡಲಾಗಿದೆ.
ಈ ಹಿಂದೆ ನಡೆದ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳ ಮೇಲೆ ಪೋಲಿಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸುಳ್ಳು ಸುದ್ಧಿ ಹರಡಿಸುವ ಸಾಮಾಜಿಕ ಜಾಲತಾಣದ ಮೇಲೆ ನಿಗಾವಹಿಸಲು ಪೋಲಿಸ್ ಇಲಾಖೆಯ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.
ಇಡೀ ಪರೀಕ್ಷಾ ವ್ಯವಸ್ಥೆ ಮೇಲೆ ನಿಗಾವಹಿಸಲು ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪ್ರತಿ ಜಿಲ್ಲೆಯಲ್ಲಿ ಡಿಸಿಗಳು, ಎಸಿಪಿಗಳು ನಿಗಾವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಖಜಾನೆಯಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಯಾಗುವ ವೇಳೆ ಬಿಗಿಪೋಲಿಸ್ ಭದ್ರತೆ, ಪ್ರಶ್ನೆ ಪತ್ರಿಕೆ ರವಾನಿಸುವ ವಿಡೀಯೋ ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಿಗದಿ ಮಾಡಿದ ಸಮಯಕ್ಕಿಂತ ಮೊದಲು ಪ್ರಶ್ನೆ ಪತ್ರಿಕೆ ಖಜಾನೆಯಿಂದ ತೆರೆಯುವಂತಿಲ್ಲ. ಅಂತಹ ಪ್ರಕರಣ ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಪ್ರಶ್ನೆ ಪತ್ರಿಕೆ ಜವಾಬ್ದಾರಿ ವಹಿಸಿದವರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪರೀಕ್ಷೆ ಮಂಡಳಿ ಎಚ್ಚರಿಕೆ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣ ನಿಷೇಧಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಭದ್ರತೆ, ಜಿಲ್ಲೆಗಳಲ್ಲಿ ಎಸ್ ಪಿ, ಡಿಸಿಗಳ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಕ್ವಾಡ್, ಫ್ಲೆಯಿಂಗ್ ಕ್ವಾಡ್ ಗಳನ್ನು ನಿಯೋಜಿಸಲಾಗಿದೆ.
ಶುಭ ಹಾರೈಸಿದ ಸಿಎಂ
ಇಂದಿನಿಂದ ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಯಾವುದೇ ಆತಂಕ, ಭಯವಿಲ್ಲದೆ ಪರೀಕ್ಷೆ ಬರೆಯುವಂತೆ ಕಿವಿಮಾತು ಹೇಳಿರುವ ಅವರು ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕಡಿಮೆ ಅಂಕ ಅಥವಾ ಅನುತ್ತೀರ್ಣರಾದರೆ ಮತ್ತೇ ಪರೀಕ್ಷೆ ಬರೆಯುವ ಅವಕಾಶವಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಧೈರ್ಯ ತುಂಬಿದ್ದಾರೆ.
ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ: ಮಧು

ಮಲ್ಲೇಶ್ವರಂ ಎಸ್ ಎಸ್ ಲ್ ಸಿ ಪರೀಕ್ಷಾ ಕೇಂದ್ರಕ್ಕೆ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡ ಬೆನ್ನಲ್ಲೇ, ಇಂದಿನಿಂದ (ಮಾರ್ಚ್ ೨೫) ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇಂದು ಆರಂಭವಾಗುತ್ತಿರುವ ಪರೀಕ್ಷೆಗಳು ಏಪ್ರಿಲ್ ೨ ರವರೆಗೆ ನಡೆಯಲಿವೆ. ರಾಜ್ಯಾದ್ಯಂತ ಒಟ್ಟು ೮,೬೫,೦೦೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಸುಗಮ ಪರೀಕ್ಷೆಗಾಗಿ ಒಟ್ಟು ೨,೮೦೦ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
“ಫೆಬ್ರವರಿ ೨೮ ರಿಂದ ನಿನ್ನೆಯವರೆಗೆ ನಡೆದ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಗಿದಿವೆ. ಅದೇ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗಲು ಇಲಾಖೆಯಿಂದ ಈ ಬಾರಿ ಕ್ವೆಶ್ಚನ್ ಬ್ಯಾಂಕ್ ವಿತರಿಸಲಾಗಿದೆ ಹಾಗೂ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲಾಗಿದೆ,” ಎಂದು ಸಚಿವರು ವಿವರಿಸಿದರು.
ಈ ಬಾರಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಎರಡರಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಗ್ರಾಮೀಣ ಹಾಗೂ ನಗರ ಪ್ರದೇಶದ ಶಾಲೆಗಳಿಗೆ ಪ್ರತ್ಯೇಕ ಗುರಿಗಳನ್ನು ನೀಡಲಾಗಿದ್ದು, ಶೈಕ್ಷಣಿಕ ಪ್ರಗತಿಯತ್ತ ವಿಶೇಷ ಗಮನ ಹರಿಸಲಾಗಿದೆ. ಪೋಷಕರು ಮತ್ತು ಮಕ್ಕಳು ಪರೀಕ್ಷಾ ಸಿದ್ಧತೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ,” ಎಂದು ಅವರು ಹೇಳಿದರು.
ಸಿಎಂ ಹಾರೈಕೆ
ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದು, ಭಯವಿಲ್ಲದೆ ಪರೀಕ್ಷೆ ಎದುರಿಸುವಂತೆ ಧೈರ್ಯ ತುಂಬಿದ್ದಾರೆ.






























