Home ಜಿಲ್ಲೆ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಭಗವಂತ ಖೂಬಾ

ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಭಗವಂತ ಖೂಬಾ

ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರಾಕೃತಿಕ ವಿಕೋಪದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆರೋಪಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 283 ಕೋಟಿ ಬೆಳೆ ನಷ್ಟವಾಗಿರುವ ಕುರಿತು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಇದುವರೆಗೆ ಜಿಲ್ಲೆಗೆ ನಯಾ ಪೈಸೆ ಪರಿಹಾರ ಬಂದಿಲ್ಲ. ರೈತರ ಬದುಕು ಡೋಲಾಯಮಾನವಾಗಿದ್ದರೂ ಸರ್ಕಾರ ಸಂವೇದನಾಶೀಲತೆಯಿಂದ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿಲ್ಲ’ ಎಂದು ದೂರಿದರು.
‘ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಲಾ 2,500 ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ದಸರಾ ಹಾಗೂ ದೀಪಾವಳಿ ಹಬ್ಬದೊಳಗೆ ಹಣ ಜಮೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಆದರೆ, ಹಬ್ಬಗಳು ಮುಗಿದರೂ ರೈತರ ಖಾತೆಗಳಿಗೆ ಹಣ ಬಂದಿಲ್ಲ. ಸರ್ಕಾರದ ಪರಿಹಾರ ಘೋಷಣೆ ಕೇವಲ ಭರವಸೆಯಾಗಿಯೇ ಉಳಿದಿದೆ’ ಎಂದು ಟೀಕಿಸಿದರು.
ಬೆಳೆ ವಿಮೆ ?51 ಕೋಟಿ ಬಿಡುಗಡೆಗೆ ಆಗ್ರಹ
‘ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ 3,73,623 ರೈತರು 5,75,838 ಎಕರೆ ಜಮೀನಿಗೆ ಸುಮಾರು 23 ಕೋಟಿ ವಿಮಾ ಕಂತು ಪಾವತಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಪಾಲಿನ 51 ಕೋಟಿಯನ್ನು ವಿಮಾ ಕಂಪನಿಗಳಿಗೆ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ ತನ್ನ ಪಾಲಿನ 51 ಕೋಟಿ ಬಿಡುಗಡೆ ಮಾಡದ ಕಾರಣ ರೈತರಿಗೆ ವಿಮಾ ಪರಿಹಾರ ದೊರೆಯುತ್ತಿಲ್ಲ’ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯ ಪ್ರವೇಶಿಸಿ ಒಂದು ವಾರದೊಳಗೆ ರಾಜ್ಯ ಸರ್ಕಾರದ ಪಾಲಿನ ಹಣ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಕಬ್ಬಿಗೆ ಟನ್‌ಗೆ 4 ಸಾವಿರ ನೀಡಲಿ
‘ಬೆಳಗಾವಿ ಜಿಲ್ಲೆಯ ಕೆಲವು ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,800ರಿಂದ 4,100ರ ವರೆಗೆ ದರ ಘೋಷಿಸಿವೆ. ಅದೇ ಮಾದರಿಯಲ್ಲಿ ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಮೊದಲ ಕಂತಿನಲ್ಲಿಯೇ ಪ್ರತಿ ಟನ್‌ಗೆ 4 ಸಾವಿರ ನೀಡಬೇಕು. ರೈತರ ಈ ಬೇಡಿಕೆಗೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ’ ಎಂದು ಖೂಬಾ ತಿಳಿಸಿದರು.
ಹರಿಯಾಣ ಮಾದರಿಯಲ್ಲಿ ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ಕನಿಷ್ಠ 1 ಸಾವಿರ ಹೆಚ್ಚುವರಿ ನೆರವು ನೀಡಬೇಕು ಎಂದು ಆಗ್ರಹಿಸಿದರು.
‘ಕಳೆದ ವಾರ ಕೆಡಿಪಿ ಸಭೆಯ ಸಂದರ್ಭದಲ್ಲಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ರೈತ ಮುಖಂಡರನ್ನು ಬ್ಯಾರಿಕೇಡ್ ಹೊರಗೆ ನಿಲ್ಲಿಸಿ ಅವಮಾನಿಸಲಾಗಿದೆ. ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಬದಲು ಅವರನ್ನು ನಿರ್ಲಕ್ಷಿಸಲಾಗುತ್ತಿದೆ. ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ’ ಎಂದರು.
‘ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸಕ್ಕರೆ ಬೆಲೆ ಕೆ.ಜಿ.ಗೆ 20ರಿಂದ 21ರಷ್ಟಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು 32ಕ್ಕೆ ಹೆಚ್ಚಿಸಿದ ಪರಿಣಾಮ ಸಕ್ಕರೆ ಕಾರ್ಖಾನೆಗಳಿಗೆ ಅನುಕೂಲವಾಗಿದೆ. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ಇಳುವರಿ ಲೆಕ್ಕಾಚಾರದಲ್ಲಿನ ಅಕ್ರಮಗಳನ್ನು ತಡೆದು ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ
‘ಬೀದರ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ 448.32 ಕೋಟಿ ವೆಚ್ಚದಲ್ಲಿ 5 ಎಕರೆ 11 ಗುಂಟೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳಲು 2025ರ ನವೆಂಬರ್ 20ರಂದು ಟೆಂಡರ್ ಪ್ರಕ್ರಿಯೆ ನಡೆದಿದೆ. 18 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಷರತ್ತಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕಟ್ಟಡದ ಪಾಯದ ಕೆಲಸವೂ ಪೂರ್ಣಗೊಂಡಿಲ್ಲ’ ಎಂದು ಆರೋಪಿಸಿದರು.
‘ಭಾಲ್ಕಿ ತಾಲ್ಲೂಕಿನ ಗೋರ್ನಾಳ, ಹಾಲಹಳ್ಳಿ, ತೇಗಂಪುರ, ಚಂದಾಪುರ, ಜಾಂತಿ, ನೀಲಮನಳ್ಳಿ ಹಾಗೂ ವಿಲಾಸಪುರ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯ ಭವನಗಳ ನಿರ್ಮಾಣಕ್ಕೆ ತಲಾ 5 ಕೋಟಿಯಂತೆ ಒಟ್ಟು 35 ಕೋಟಿ ಮಂಜೂರಾಗಿದೆ. ಈ ಪೈಕಿ 14 ಕೋಟಿ ಬಿಡುಗಡೆಯಾಗಿದ್ದರೂ ಕಾಮಗಾರಿಗಳು ಆರಂಭವಾಗಿಲ್ಲ’ ಎಂದು ದೂರಿದರು.
ತುರ್ತು ಕಾಮಗಾರಿಗಳಿಗೆ ಅನ್ವಯಿಸುವ 4ಜಿ ವಿನಾಯಿತಿಯನ್ನು ದುರ್ಬಳಕೆ ಮಾಡಿಕೊಂಡು ಟೆಂಡರ್ ಕರೆಯದೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್) ಕಾಮಗಾರಿಗಳನ್ನು ವಹಿಸಲಾಗುತ್ತಿದೆ. ಈ ಕಾಮಗಾರಿಗಳಲ್ಲಿ ಹಣ ದುರುಪಯೋಗವಾಗುತ್ತಿದೆ ಎಂದು ಆರೋಪಿಸಿ ಸಮಗ್ರ ತನಿಖೆಗೆ ಆಗ್ರಹಿಸಿದರು.
ಬಿಎಸ್‌ಎಸ್‌ಕೆ ಪುನರಾರಂಭಕ್ಕೆ ಖೂಬಾ ಒತ್ತಾಯ
‘ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ಲೀಸ್ ಕಮ್ ಸೇಲ್ ಆಧಾರದಲ್ಲಿ ಪುನರಾರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವರು ಆಸಕ್ತಿ ತೋರುತ್ತಿಲ್ಲ. ತಮ್ಮ ಕುಟುಂಬಕ್ಕೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಯ ಹಿತಾಸಕ್ತಿಗಾಗಿ ಬಿಎಸ್‌ಎಸ್‌ಕೆ ಪುನರಾರಂಭವನ್ನು ವಿಳಂಬ ಮಾಡಲಾಗುತ್ತಿದೆ’ ಎಂದು ಖೂಬಾ ಆರೋಪಿಸಿದರು.
‘ಬೀದರ್ ವಿಮಾನಯಾನ ಸೇವೆಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) 21 ಕೋಟಿ ಅನುದಾನ ನೀಡಲಾಗಿದೆ. ಆದರೂ ವಿಮಾನಯಾನ ಸೇವೆ ಸಮರ್ಪಕವಾಗಿ ನಡೆಯುತ್ತಿಲ್ಲ. ವಿಮಾನಯಾನಕ್ಕೆ ಅನುದಾನ ನೀಡುವ ಸರ್ಕಾರ ರೈತರ ನೆರವಿಗೂ ಮುಂದಾಗಬೇಕು. ಕೆಕೆಆರ್‌ಡಿಬಿ ಅಧ್ಯಕ್ಷರೂ ಆಗಿರುವ ಈಶ್ವರ ಖಂಡ್ರೆ ಅವರು ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 200 ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಬ್ರಿಮ್ಸ್ನಲ್ಲಿ ಅವ್ಯವಸ್ಥೆ, ಅಕ್ರಮ: ಸೋಮನಾಥ ಪಾಟೀಲ ಆರೋಪ
‘ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಜಿಲ್ಲೆಯ ಬಡ ರೋಗಿಗಳಿಗೆ ಆಸರೆಯಾಗಬೇಕಾದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್್ಸ) ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಲಿಫ್ಟ್ಗಳು, ಸಿಟಿ ಸ್ಕ್ಯಾನ್ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪ್ರಯೋಗಾಲಯಗಳಲ್ಲಿ ಸಿಬ್ಬಂದಿ ಕೊರತೆಯಿದ್ದು, ಸ್ವಚ್ಛತೆಯನ್ನೂ ಕಡೆಗಣಿಸಲಾಗಿದೆ’ ಎಂದು ಆರೋಪಿಸಿದರು.
‘ಈ ಹಿಂದೆ ಉಪಲೋಕಾಯುಕ್ತರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಂದ ಹಣ ಪಡೆಯುತ್ತಿದ್ದ ಸಿಬ್ಬಂದಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಒಂಬತ್ತು ಮಂದಿ ಹಿರಿಯ ವೈದ್ಯರನ್ನು ಕಡೆಗಣಿಸಿ, ಅರ್ಹತೆ ಕುರಿತು ಆಕ್ಷೇಪವಿರುವ ವ್ಯಕ್ತಿಯನ್ನು ನಿರ್ದೇಶಕ ಹುದ್ದೆಯಲ್ಲಿ ಮುಂದುವರಿಸಲಾಗಿದೆ’ ಎಂದು ದೂರಿದರು.
‘ನಿಯಮದ ಪ್ರಕಾರ ಕರ್ನಾಟಕ ಲೆಕ್ಕಪತ್ರ ಸೇವೆಯ ಅಧಿಕಾರಿಯನ್ನು ಹಣಕಾಸು ಸಲಹೆಗಾರರನ್ನಾಗಿ ನೇಮಿಸಬೇಕಿದ್ದರೂ ಜಿಲ್ಲಾ ಮಟ್ಟದಲ್ಲಿಯೇ ಪ್ರಕಾಶ್ ಸೂರ್ಯವಂಶಿ ಅವರನ್ನು ನೇಮಕ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲೂ 14 ಲಕ್ಷದ ಉಪಕರಣಗಳು, 45 ಲಕ್ಷದ ವಿದ್ಯುತ್ ಸಾಮಗ್ರಿಗಳು ಹಾಗೂ 27 ಲಕ್ಷದ ಪ್ಲಂಬಿಂಗ್ ಸಾಮಗ್ರಿಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ವಹಿವಾಟಿನ ಷರತ್ತುಗಳನ್ನು ವಿಧಿಸಲಾಗಿದೆ. ಈ ಎಲ್ಲ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭ್ರಷ್ಟ ಅಧಿಕಾರಿಗಳನ್ನು ಬದಲಿಸಿ ದಕ್ಷ ಅಧಿಕಾರಿಗಳನ್ನು ನೇಮಿಸದಿದ್ದರೆ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
‘ಜಿಲ್ಲಾಡಳಿತವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಉಸ್ತುವಾರಿ ಸಚಿವರು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ವಿಳಂಬ, ಆಸ್ಪತ್ರೆಯ ಅವ್ಯವಸ್ಥೆ ಹಾಗೂ ರೈತರ ಸಮಸ್ಯೆಗಳ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ’ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಹಾನಗರ ಪಾಲಿಕೆ ಸದಸ್ಯ ಶಶಿ ಹೊಸಳ್ಳಿ, ಮುಖಂಡರಾದ ಅಶೋಕ ಕರಂಜಿ, ಶ್ರೀನಿವಾಸ ಚೌದ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.