
ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ, ಮೀಸಲಾತಿ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ಆಗಸ್ಟ್ ೨೮ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ರಾಜ್ಯಮಟ್ಟದ ೬ನೇ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಡಿ. ಶಿವಶಂಕರ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಎಸ್ಸಿ/ಎಸ್ಟಿ ಸಮುದಾಯದ ನೌಕರರಿಗೆ ಹಲವು ರೀತಿಯ ತಾರತಮ್ಯ ಎದುರಾಗುತ್ತಿದೆ. ನೌಕರರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ಎಲ್ಲರೂ ಪಕ್ಷಾತೀತವಾಗಿ, ಸಂಘಟಿತವಾಗಿ ಒಂದೇ ವೇದಿಕೆಯಲ್ಲಿ ಒಗ್ಗೂಡುವ ಅಗತ್ಯವಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಸುಮಾರು ೭.೭೫ ಲಕ್ಷ ಹುದ್ದೆಗಳ ಪೈಕಿ ಕೇವಲ ೪ ಲಕ್ಷದಷ್ಟು ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ೨.೮೪ ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಇದಲ್ಲದೆ ಸುಮಾರು ೨೪ ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಇನ್ನೂ ಭರ್ತಿಯಾಗದೆ ಇರುವುದರಿಂದ ಎಸ್ಸಿ/ಎಸ್ಟಿ ಸಮುದಾಯದವರಿಗೆ ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಆ.೨೮ರಂದು ನಡೆಯಲಿರುವ ರಾಜ್ಯಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ನುಡಿಗಳನ್ನಾಡಲಿದ್ದಾರೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು, ಶಾಸಕರು, ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಪ್ರಗತಿಪರ ಸ್ವಾಮೀಜಿಗಳು ಮತ್ತು ಚಿಂತಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಡಿ. ಶಿವಶಂಕರ ತಿಳಿಸಿದರು.
ಸಮಿತಿಯ ಜಿಲ್ಲಾ ಅಧ್ಯಕ್ಷ ಆರ್.ಎಂ. ನಾಟೇಕಾರ್ ಮಾತನಾಡಿ, ಯಾದಗಿರಿ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ನೌಕರರು ಹಾಗೂ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಆರ್. ವಿಜಯಕುಮಾರ್, ಶಹಾಪುರ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕಾಂಬ್ಳೆ, ಸುರಪುರ ತಾಲೂಕು ಅಧ್ಯಕ್ಷ ಸಂಜೀವ್ ದರ್ಬಾರಿ, ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಮೋಹನ ಸೇರಿದಂತೆ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.





























