Home ಮುಖಪುಟ ಸುದ್ದಿ ಅತ್ಯಾಧುನಿಕ ಆರೋಗ್ಯ ಕಮಾಂಡ್-ಕಂಟ್ರೋಲ್ ಸೆಂಟರ್‌ಗೆ ಚಾಲನೆ

ಅತ್ಯಾಧುನಿಕ ಆರೋಗ್ಯ ಕಮಾಂಡ್-ಕಂಟ್ರೋಲ್ ಸೆಂಟರ್‌ಗೆ ಚಾಲನೆ

ಬೆಂಗಳೂರು:ಮೇ೨೫-ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಬಸವೇಶ್ವರನಗರದಲ್ಲಿ ಅತ್ಯಾಧುನಿಕ ಸಮಗ್ರ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್. ಶಾಸಕರದ ಸುರೇಶ್ ಕುಮಾರ್.ಪ್ರೀಯ ಕೃಷ್ಣ. ಸಲೀಂ ಅಹಮದ್ ಉಪಸ್ಥಿತರಿದ್ದರು.


“ಒಂದು ಕರೆ ನಮಗೆ ತುರ್ತು ಸೇವೆ ನಿಮಗೆ” ಎಂಬ ಧ್ಯೇಯದಡಿ ಆರಂಭಗೊಂಡಿರುವ ಈ ಕೇಂದ್ರೀಕೃತ ಕಮಾಂಡ್ ಸೆಂಟರ್, ರಾಜ್ಯದ ತುರ್ತು ಆರೋಗ್ಯ ನಿರ್ವಹಣೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸಲಿರುವ ಈ ಕೇಂದ್ರವು ವೈದ್ಯಕೀಯ ತುರ್ತು ಪರಿಸ್ಥಿತಿ, ರಸ್ತೆ ಅಪಘಾತ, ಗರ್ಭಿಣಿಯರ ಆರೈಕೆ ಸೇರಿದಂತೆ ವಿವಿಧ ತುರ್ತು ಸಂದರ್ಭಗಳಲ್ಲಿ ತ್ವರಿತ ಸ್ಪಂದನೆ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


ಇನ್ನೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತಾನಾಡಿ ಕೋವಿಡ್ ಅವಧಿಯಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಕೆಲವು ಕೊರತೆಗಳು ಕಂಡುಬಂದಿದ್ದವು. ಮುಂದಿನ ದಿನಗಳಲ್ಲಿ ಇಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಆಧುನಿಕ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯ ಅಗತ್ಯತೆ ಸ್ಪಷ್ಟವಾಗಿತ್ತು ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆ (Wಊಔ) ಮಟ್ಟದಲ್ಲಿಯೂ ಇಂತಹ ಕೇಂದ್ರೀಕೃತ ವ್ಯವಸ್ಥೆಗಳ ಕುರಿತು ಚರ್ಚೆಗಳು ನಡೆದಿದ್ದು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆರೋಗ್ಯ ಇಲಾಖೆಯಡಿ ಈ ರೀತಿಯ ಸಮಗ್ರ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಕರ್ನಾಟಕದಲ್ಲಿ ಸ್ಥಾಪನೆಯಾಗಿದೆ ಎಂದು ತಿಳಿಸಿದರು.


ಈ ಕೇಂದ್ರದ ಮೂಲಕ ಪ್ರಕೃತಿ ವಿಕೋಪ, ಬೆಂಕಿ ಅವಘಡ, ಸಾಂಕ್ರಾಮಿಕ ರೋಗಗಳ ಹರಡುವಿಕೆ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳನ್ನು ಸಮನ್ವಯದಿಂದ ನಿರ್ವಹಿಸಲು ಸಾಧ್ಯವಾಗಲಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಇತರೆ ಇಲಾಖೆಗಳೊಂದಿಗೆ ನೇರ ಸಂಪರ್ಕ ಸಾಧಿಸಿ, ತುರ್ತು ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಈ ವ್ಯವಸ್ಥೆ ನೆರವಾಗಲಿದೆ.


ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ, ತಂತ್ರಜ್ಞಾನ ಆಧಾರಿತ ಕಣ್ಗಾವಲು ವ್ಯವಸ್ಥೆ, ೨೪/೭ ಮಾನಿಟರಿಂಗ್ ವ್ಯವಸ್ಥೆ ಅಳವಡಿಸಲಾಗಿದೆ. ಜೊತೆಗೆ ೧೦೮ ಆಂಬ್ಯುಲೆನ್ಸ್ ಸೇವೆಯೊಂದಿಗೂ ಸಮನ್ವಯ ಸಾಧಿಸಲಾಗಿದ್ದು, ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ವೇಗದ ಸ್ಪಂದನೆ ದೊರೆಯುವಂತೆ ವ್ಯವಸ್ಥೆ ರೂಪಿಸಲಾಗಿದೆ.
ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಕೈಗೊಂಡಿರುವ ಈ ಮಹತ್ವದ ಹೆಜ್ಜೆ, ರಾಜ್ಯದ ತುರ್ತು ಆರೋಗ್ಯ ನಿರ್ವಹಣೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಮೂಡಿಸಿದೆ ಎಂದು ತಿಳಿಸಿದರು.