Home ಜಿಲ್ಲೆ ಕಲಬುರಗಿ ಫೆ.9 ರಂದು ರಾಜ್ಯಾದ್ಯಂತ ಪ್ರತಿಭಟನೆ: ಡಿ.ಜಿ.ಸಾಗರ

ಫೆ.9 ರಂದು ರಾಜ್ಯಾದ್ಯಂತ ಪ್ರತಿಭಟನೆ: ಡಿ.ಜಿ.ಸಾಗರ

ಕಲಬುರಗಿ,ಫೆ.2-ಎಸ್.ಸಿ ಮತ್ತು ಎಸ್.ಟಿ.ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯಗಳಲ್ಲಿ ಧರ್ಮ, ಜಾತಿ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳ, ದೌರ್ಜನ್ಯಗಳನ್ನು ತಡೆಗಟ್ಟಲು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೊಗ (ಯುಜಿಸಿ) ತಂದಿರುವ ನಿಯಮಗಳನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ ಎಂದು ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಸಿ ಮತ್ತು ಎಸ್.ಟಿ.ವಿದ್ಯಾರ್ಥಿಗಳಿಗೆ ಮಾತ್ರ ಪ್ರತ್ಯೇಕ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.
ಯುಜಿಸಿ ತಂದಿರುವ ನಿಯಮಗಳಿಗೆ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕೇಂದ್ರ ಸರ್ಕಾರ ಕೂಡಲೇ ಮುಂದಾಗಬೇಕು ಮತ್ತು ಯುಜಿಸಿ ತಂದಿರುವ ನಿಯಮ ಎಸ್.ಸಿ/ಎಸ್.ಟಿ.ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹೊರಡಿಸಬೇಕು ಎಂದು ಆಗ್ರಹಿಸಿ ಫೆ.9 ರಂದು ಬೆಳಿಗ್ಗೆ 11.30ಕ್ಕೆ ರಾಜ್ಯದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ, ಧರಣಿ ನಡೆಸಿ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಹಾಗೂ ಪ್ರಗತಿಪರ ಚಿಂತಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಸಮಿತಿ ರಾಜ್ಯ ಖಜಾಂಚಿ ಬಿ.ಸಿ.ವಾಲಿ, ಜಿಲ್ಲಾ ಮುಖಂಡರಾದ ಸುರೇಶ ಹಾದಿಮನಿ, ಹೆಚ್.ಶಂಕರ, ಉಮೇಶ ನರೋಣಾ, ಎಸ್.ಪಿ.ಸುಳ್ಳದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.