
ಕಲಬುರಗಿ,ಜೂ.19-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮಲ ತಂದೆಯಾದ ಆರೋಪಿಗೆ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ.ದಂಡ ವಿಧಿಸಿದೆ.
ಹರಿಶ್ಚಂದ್ರ ತಂದೆ ಬಿಲ್ಲು ಚವ್ಹಾಣ್ (45) ಶಿಕ್ಷೆಗೆ ಗುರಿಯಾದ ಆರೋಪಿ. ಈತ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಬ್-ಅರ್ಬನ್ ಪೊಲೀಸ್ ಠಾಣೆ ಪಿಐ ಸಂತೋಷ ಎಲ್.ತಟ್ಟೆಪಳ್ಳಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ್ ಸಿ.ಜಿ.ಅವರು ಆರೋಪಿಗೆ ಪೊಕ್ಸೋ ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ.ದಂಡ ವಿಧಿಸಿದ್ದಾರೆ.
ತೀರ್ಪಿನ ದಿನಾಂಕದಿಂದ ಒಂದು ತಿಂಗಳ ಅವಧಿಯೊಳಗೆ ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.






















