
ಬೆಂಗಳೂರು.ನ.೨-ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ವಿಚಾರ ಇದೀಗ ದೆಹಲಿ ಅಂಗಳ ತಲುಪುವ ಸಾಧ್ಯತೆ ಇದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.
ಸ್ಟಿಂಗ್ ಆಪರೇಷನ್ ಹಿಂದೆ ಸ್ವಪಕ್ಷದವರೇ ಇದ್ದಾರೆ ಎಂದು ಹಿಂದೆ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ಇದೀಗ ಈ ವಿಚಾರವನ್ನು ರಾಹುಲ್ ಗಾಂಧಿ ಗಮನಕ್ಕೆ ತರಲು ಮುಂದಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೂ ಈಗಾಗಲೇ ಈ ಕುರಿತು ಸಮಾಲೋಚನೆ ನಡೆಸಿದ್ದು,ದೆಹಲಿ ಭೇಟಿಯಲ್ಲಿ ಪ್ರಸ್ತಾಪಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಸ್ಟಿಂಗ್ ಪ್ರಕರಣದ ಹಿಂದೆ ಸ್ವಪಕ್ಷೀಯರ ಕೈವಾಡವಿದೆಯೇ ಎಂಬ ಅನುಮಾನ, ಪಕ್ಷದೊಳಗಿನ ಬೆಳವಣಿಗೆಗಳು ಹಾಗೂ ಈ ವಿಚಾರದಿಂದ ಉಂಟಾಗಿರುವ ರಾಜಕೀಯ ಪರಿಣಾಮಗಳ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚಿಸುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಜೊತೆ ಇಂದಿನ ಭೇಟಿಗೆ ಮಹತ್ವ ಬಂದಿದೆ. ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿರುವ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ವಿಚಾರವನ್ನು ಹೇಗೆ ಪರಿಗಣಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಸಮಾಲೋಚನೆ ನಡೆಸಿದರು.
ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರಾದ ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಡಾ. ತಿಮ್ಮಯ್ಯ, ಶಿವಕುಮಾರ್, ಮಾಜಿ ಸದಸ್ಯ ರಮೇಶ್ ಬಾಬು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಉಪಸ್ಥಿತರಿದ್ದರು.




















