ಸಂಘಸಂಸ್ಥೆ ಚಟುವಟಿಕೆ ನಿರ್ಬಂಧಕ್ಕೆ ತಡೆ

ಬೆಂಗಳೂರು, ಅ. ೨೮- ಸಾರ್ವಜನಿಕ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಸಂಘಸ್ಥಂಸ್ಥೆಗಳು ಯಾವುದೇ ಚಟುವಟಿಕೆಗಳನ್ನು ನಡೆಸಲು ಪೊಲೀಸ್ ಇಲಾಖೆಯ ಪೂರ್ವಾನುಮತಿ ಕಡ್ಡಾಯ ಎಂಬ ಸರ್ಕಾರದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದ್ದು, ಸರ್ಕಾರಿ ಆದೇಶದ ಮೂಲಕ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.


ಯಾವುದೇ ಸಂಘಸಂಸ್ಥೆಗಳು ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ನಡೆಸಲು ಹಾಗೂ ೧೦ಕ್ಕಿಂತ ಹೆಚ್ಚು ಜನ ಸೇರಲು ಪೊಲೀಸ್ ಇಲಾಖೆಯ ಪೂರ್ವಾನುಮತಿ ಎಂದು ಅಗತ್ಯ ಇಲ್ಲದಿದ್ದರೆ ಅದನ್ನು ಕಾನೂನುಬಾಹಿರ ಅಕ್ರಮ ಕೂಟ ಎಂದು ಪರಿಗಣಿಸಲಾಗುತ್ತದೆ ಎಂಬ ಸರ್ಕಾರದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.


ಸರ್ಕಾರ ಆದೇಶ ಪ್ರಶ್ನಿಸಿ, ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ, ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರಾವಾಡದ ರಾಜೀವ್ ಮಲ್ಹಾರ ಕುಲಕರ್ಣಿ, ಬೆಳಗಾವಿಯ ಉಮಾ ಸತ್ಯಜಿತ್ ಚವ್ಹಾಣ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಧಾರಾವಾಡದ ಹೈಕೋರ್ಟ್‌ನ ವಿಭಾಗೀಯ ಪೀಠದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿದರು.


ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ನ ಚಟುವಟಿಕಗಳಿಗೆ ಹಾಗೂ ಪಥ ಸಂಚಲನ ನಿರ್ಬಂಧಿಸಲು ಸರ್ಕಾರ ಸಂಘಸಂಸ್ಥೆಗಳಿಗೆ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಯನ್ನು ನಡೆಸುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಈ ಆದೇಶದಿಂದ ಆರ್‌ಎಸ್‌ಎಸ್‌ನ ಚಟುವಟಿಕೆಗಳು ಪಥಸಂಚಲನವನ್ನು ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಕಡ್ಡಾಯವಾಗಿತ್ತು.

ನ್ಯಾಯಾಲಯದ ಈ ಆದೇಶದಿಂದ ಆರ್‌ಎಸ್‌ಎಸ್‌ನ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.


ಸಾರ್ವಜನಿಕ ಹಾಗೂ ಸರ್ಕಾರಿ ಜಾಗದಲ್ಲಿ ೧೦ ಕ್ಕಿಂತ ಹೆಚ್ಚು ಜನ ಸೇರಿದರೆ ಅದನ್ನು ಅಕ್ರಮ ಕೂಟ ಎಂದು ಪರಿಗಣಿಸಿ ಆರ್‌ಎಸ್‌ಎಸ್‌ನ ಪಥ ಸಂಚಲನಕ್ಕೆ ಅನುಮತಿ ನೀಡದೆ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಿತ್ತು.


ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್ ನಾಗಪ್ರಸನ್ನ ಇದ್ದ ಅವರ ಪೀಠ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಸರ್ಕಾರ, ಗೃಹ ಇಲಾಖೆ, ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.


ರಾಜ್ಯ ಸರ್ಕಾರ ೨೦೨೫ ರ ಅಕ್ಟೋಬರ್ ೧೮ ರಂದು ಹೊರಡಿಸಿದ್ದ ಆದೇಶದಲ್ಲಿ ಅನುಮತಿ ಇಲ್ಲದೆ ಹತ್ತು ಜನ ಸೇರಿದರೆ ಅಪರಾಧ ಎಂದು ಹೇಳಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿ ಪ್ರವೇಶಕ್ಕೂ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ ೧೯(೧) ಎ,ಬಿ ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ನ್ಯಾಯಪೀಠ ಹೇಳಿದೆ.


ಸರ್ಕಾರದ ಆದೇಶದ ಸಂವಿಧಾನ ಬಾಹಿರ ಎಂದು ಪುನಶ್ಚೇತನ ಸೇವಾ ಸಂಸ್ಥೆ ಪರ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ಈ ಆದೇಶ ಮೇಲ್ನೋಟಕ್ಕೆ ಕಾನೂನುಬಾಹಿರವಾಗಿದೆ ಎಂದು ಕಂಡು ಬಂದಿದ್ದು, ಸಂವಿಧಾನ ಕೊಟ್ಟ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಈ ಸಂದರ್ಭದಲ್ಲಿ ರಾಜ್ಯ ಸರ್ಕಾದರ ಪರ ವಕೀಲರು ವಾದ ಮಂಡಿಸಲು ಒಂದು ದಿನ ಕಾಲಾವಕಾಶ ಕೇಳಿದ್ದು, ನ್ಯಾಯಾಲಯ ನಿಮಗೆ ನೋಟಿಸ್ ಕೊಡಲಾಗುತ್ತದೆ. ನೀವು ವಾದ ಮಾಡಿ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.