
ನವದೆಹಲಿ,ನ.೨-ಬಂಗಾಳಕೊಲ್ಲಿ ಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ರಾಜ್ಯಗಳ ಹವಾಮಾನದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಪೂರ್ವ, ಮಧ್ಯ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಬಲವಾದ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವಿರುವುದರಿಂದ ಆ ಭಾಗದ ಜನರು ಸೂಕ್ತ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಬಲವಾದ ಗಾಳಿ ಬೀಸುವ ಸಮಯದಲ್ಲಿ ಬಯಲು ಪ್ರದೇಶದ ಜನರು ಜಾಗರೂಕರಾಗಿರಲು ಕೋರಲಾಗಿದ್ದು, ಸಮುದ್ರವು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ನವೆಂಬರ್ ೨ ರಂದು ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಅಸ್ಸಾಂ ಮತ್ತು ತೆಲಂಗಾಣ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ.























