Home ಜಿಲ್ಲೆ ಹೋರಾಟಕ್ಕೆ ಫಲ: ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿ, ಮೂಲಸೌಲಭ್ಯ ಕಲ್ಪಿಸಿದ ಅಧಿಕಾರಿಗಳಿಗೆ ಗ್ರಾಮಸ್ಥರ ಮೆಚ್ಚುಗೆ

ಹೋರಾಟಕ್ಕೆ ಫಲ: ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿ, ಮೂಲಸೌಲಭ್ಯ ಕಲ್ಪಿಸಿದ ಅಧಿಕಾರಿಗಳಿಗೆ ಗ್ರಾಮಸ್ಥರ ಮೆಚ್ಚುಗೆ


ಯಾದಗಿರಿ:ಜು.೨೩: ತಾಲ್ಲೂಕಿನ ಹಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸ್ಕನಹಳ್ಳಿ ಗ್ರಾಮದಲ್ಲಿ ಮೂಲಸೌಲಭ್ಯಗಳ ಕೊರತೆ ಕುರಿತು ನಡೆದ ಹೋರಾಟಕ್ಕೆ ಫಲ ಸಿಕ್ಕಿದ್ದು, ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿ ಸೇರಿದಂತೆ ಹಲವು ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಹಾಗೂ ಸ್ವಚ್ಛತಾ ವ್ಯವಸ್ಥೆಗಳ ನಿರ್ಲಕ್ಷ್ಯ ಖಂಡಿಸಿ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ನೇತೃತ್ವದಲ್ಲಿ ತಮಟೆ ಬಾರಿಸುವ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಲಾಗಿತ್ತು. ಹೋರಾಟದ ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜೆಸ್ಕಂ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗುತ್ತಿಗೆದಾರರು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ನಂತರ ಸುಮಾರು ?೧.೫ ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ಥಿಗೊಳಿಸಿ, ನೀರಿನ ಮೇಲ್ತೊಟ್ಟಿಯನ್ನು ಸ್ವಚ್ಛಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ. ಜೊತೆಗೆ ಸೋರಿಕೆಯಾಗಿದ್ದ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ಥಿ ಮಾಡಿ, ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದಲ್ಲದೆ, ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗಿದೆ. ಶಿಥಿಲಗೊಂಡಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿದ್ದು, ಬಾಗಿದ್ದ ಕಂಬಗಳನ್ನು ಸರಿಪಡಿಸಲಾಗಿದೆ. ಮನೆಗಳ ಮೇಲಿಂದ ಜೋತುಬಿದ್ದಿದ್ದ ವಿದ್ಯುತ್ ತಂತಿಗಳನ್ನೂ ದುರಸ್ತಿಗೊಳಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜೆಸ್ಕಂ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದು, ಹೋರಾಟಕ್ಕೆ ಸ್ಪಂದಿಸಿ ಸಾರ್ವಜನಿಕರಿಗೆ ಮೂಲಸೌಲಭ್ಯ ಕಲ್ಪಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಭೀಮಸೇನರಾವ್, ಭೀಮಾಶಂಕರ, ಪವನ್, ಮಲ್ಲಿಕಾರ್ಜುನ, ರಫೀಕ್, ಯಲ್ಲಪ್ಪ, ಆಂಜನೇಯ, ಖಾಸಿಂ, ಹಣಮಂತ, ಅಲ್ಲಿಸಾಬ್, ಖಾಜಸಾಬ್ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.

“ಮಸ್ಕನಹಳ್ಳಿ ಗ್ರಾಮದಲ್ಲಿ ನಡೆಸಿದ ತಮಟೆ ಚಳುವಳಿಗೆ ತಕ್ಷಣ ಸ್ಪಂದಿಸಿ ಶುದ್ಧ ಕುಡಿಯುವ ನೀರು, ವಿದ್ಯುತ್ ಹಾಗೂ ಇತರ ಮೂಲಸೌಲಭ್ಯಗಳ ಸಮಸ್ಯೆಗಳನ್ನು ಪರಿಹರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜೆಸ್ಕಂ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗುತ್ತಿಗೆದಾರರಿಗೆ ಗ್ರಾಮದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.”

  • ಉಮೇಶ್ ಕೆ. ಮುದ್ನಾಳ್, ಸಾಮಾಜಿಕ ಹೋರಾಟಗಾರ