Home ಜಿಲ್ಲೆ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಸಮಸ್ಯೆ ಪರಿಹಾರಕ್ಕೆ ವಿದ್ಯಾರ್ಥಿ ವೇದಿಕೆ ಎಚ್ಚರಿಕೆ

ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಸಮಸ್ಯೆ ಪರಿಹಾರಕ್ಕೆ ವಿದ್ಯಾರ್ಥಿ ವೇದಿಕೆ ಎಚ್ಚರಿಕೆ

ಯಾದಗಿರಿ: ನಗರದ ಗಂಜ್ ಪ್ರದೇಶದಲ್ಲಿರುವ ಮೌನೇಶ್ವರ ದೇವಸ್ಥಾನದ ಹಿಂಭಾಗದ ಸರ್ಕಾರಿ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ಅವ್ಯವಸ್ಥೆ ತಾಂಡವವಾಡುತ್ತಿದೆ. ಈ ಕುರಿತು ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ವಿದ್ಯಾರ್ಥಿ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ.

ವಸತಿ ನಿಲಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಗುರುವಾರ ಕರ್ನಾಟಕ ವಿದ್ಯಾರ್ಥಿ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿದ್ದು ಸಾಹುಕಾರ ಹಾಗೂ ಜಿಲ್ಲಾ ಅಧ್ಯಕ್ಷ ಕಿರಣ್ ಚಾಮಾ ನೇತೃತ್ವದಲ್ಲಿ ಮುಖಂಡರು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ವಾರ್ಡನ್ ಅವರೊಂದಿಗೆ ಚರ್ಚಿಸಿದರು.

ವಸತಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆಯ ಕೊರತೆ ಹಾಗೂ ಶೌಚಾಲಯಗಳ ಸಮಸ್ಯೆ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳಿವೆ. ಇವುಗಳನ್ನು ಕೂಡಲೇ ಪರಿಹರಿಸುವಂತೆ ಮುಖಂಡರು ಅಧಿಕಾರಿಗಳನ್ನು ಒತ್ತಾಯಿಸಿದರು.

ಸ್ಥಳದಲ್ಲೇ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಗಳ ಕುರಿತು ಮಾಹಿತಿ ನೀಡಿದ ಮುಖಂಡರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಪನಿರ್ದೇಶಕರು ಒಂದು ವಾರದೊಳಗೆ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

“ವಾರದೊಳಗೆ ಸಮಸ್ಯೆಗಳನ್ನು ಪರಿಹರಿಸದಿದ್ದರೆ ವಿದ್ಯಾರ್ಥಿಗಳ ಹಿತಕ್ಕಾಗಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಕುಂಬಾರ, ವಿದ್ಯಾರ್ಥಿ ವೇದಿಕೆ ತಾಲೂಕು ಅಧ್ಯಕ್ಷ ಮಲ್ಲು ಎಸ್. ಬಡಿಗೇರ, ಮಲ್ಲಪ್ಪ, ಸಾಬು ಬಡಿಗೇರ, ನಿತೀಶ್ ಸೇರಿದಂತೆ ವಿದ್ಯಾರ್ಥಿ ವೇದಿಕೆ ಮುಖಂಡರು, ಕಾರ್ಯಕರ್ತರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.