
ಕಲಬುರಗಿ, ಜು.26: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟವನ್ನು ಖಂಡಿಸಿ ಕಲಬುರಗಿಯಲ್ಲಿ ಶನಿವಾರ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
‘ಗುಲ್ಬರ್ಗಾ ಸ್ಟೂಡೆಂಟ್ಸ್ ಮೂವ್‍ಮೆಂಟ್’ ಹಾಗೂ ‘ಸ್ಟೂಡೆಂಟ್ಸ್ ರೆವಲ್ಯೂಷನ್ ಯುವ ಶಕ್ತಿ’ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರತಿಭಟನೆಗೆ ಕಾಂಗ್ರೆಸ್ ಯುವ ಮುಖಂಡ ಫರಾಜ್ ಉಲ್ ಇಸ್ಲಾಂ ನೇತೃತ್ವ ವಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಫರಾಜ್ ಉಲ್ ಇಸ್ಲಾಂ,ಪರೀಕ್ಷಾ ವ್ಯವಸ್ಥೆಯ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟದಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಆದರೆ ರಾಜೀನಾಮೆ ಮಾತ್ರ ಪರಿಹಾರವಲ್ಲ. ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಅಂತ್ಯ ಕಂಡು, ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು
ಸಂಜೆ 4 ಗಂಟೆಗೆ ಮಹಾನಗರ ಪಾಲಿಕೆ ಟೌನ್‍ಹಾಲ್‍ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಗತ್ ವೃತ್ತದವರೆಗೆ ಸಾಗಿತು. ಮೆರವಣಿಗೆಯುದ್ದಕ್ಕೂ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾಲೇಜು ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿದರು.






























