Home ಜಿಲ್ಲೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ನಾಡಿನ ಸಂಸ್ಕೃತಿ ಬೆಳೆಸಲಿ : ಅಪರ ಜಿಲ್ಲಾಧಿಕಾರಿ ಸುರೇಖಾ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ನಾಡಿನ ಸಂಸ್ಕೃತಿ ಬೆಳೆಸಲಿ : ಅಪರ ಜಿಲ್ಲಾಧಿಕಾರಿ ಸುರೇಖಾ

ಬೀದರ್ ಅ. ೧೪: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಸುರೇಖಾ ಅವರು ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮAದಿರದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ‘ಯುವ ಸೌರಭ’ ಯುವಜನರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳು ತಮ್ಮಲ್ಲಿರುವ ಕೌಶಲ್ಯ ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೊರಹಾಕಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ನಾಡಿನ ಶ್ರೀಮಂತ ಸಂಸ್ಸೃತಿಯನ್ನು ಇಂದಿನ ಯುವ ಜನಾಂಗಕ್ಕೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಬೀದರ್ ಪ್ರಾದೇಶಿಕ ಕೇಂದ್ರದ ಡೀನ್ ಹಾಗೂ ನಿರ್ದೇಶಕ ಡಾ. ಆರ್.ವಿ. ಗಂಗಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ವಿಶೇಷ ಕೌಶಲ್ಯ ಅಡಗಿರುತ್ತದೆ. ಅದನ್ನು ಗುರುತಿಸಿಕೊಂಡು ಸೂಕ್ತ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಪ್ರದರ್ಶಿಸಿ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಿದಾಸ್ ನಿರೂಪಿಸಿ, ವಂದಿಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ. ಚಂದ್ರಕಾAತ ಗಂಗಶೆಟ್ಟಿ ಮಾತನಾಡಿದರು.

ಸ್ವಾಮಿ ನರೇಂದ್ರ ಪಿಯು ಕಾಲೇಜಿನ ನಿರ್ದೇಶಕಿ ಕಲ್ಪನಾ, ಸದ್ಗುರು ಸಿದ್ದಾರೂಢ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ನಾಗಪ್ಪ ಜಾಣಕನೋರ್ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನ ಮನಸೂರೆ
ಕಾರ್ಯಕ್ರಮದ ಬಳಿಕ ನಡೆದ ಸಾಂಸ್ಕೃತಿಕ ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಮಾನಸಾ ಪಾಂಚಾಳ ಮತ್ತು ತಂಡ (ಬೀದರ್) ರಕ್ಷಿತಾ ಮತ್ತು ತಂಡ (ಭಾಲ್ಕಿ) ಸುಗಮ ಸಂಗೀತ ಪ್ರಸ್ತುತಪಡಿಸಿದರು. ಶ್ರೇಯಾ ಮತ್ತು ತಂಡ (ಬೀದರ್) ತರುಣ ಮತ್ತು ತಂಡ (ಔರಾದ) ಮೇಘಾ ಮತ್ತು ತಂಡ (ಚಿಟಗುಪ್ಪ) ಸಮೂಹ ನೃತ್ಯ ಪ್ರದರ್ಶಿಸಿದರು.
ಅಂಬಿಕಾ ಮತ್ತು ತಂಡ (ಮನ್ನಳ್ಳಿ) ಕೋಲಾಟ ಪ್ರದರ್ಶಿಸಿದರೆ, ನಿಷ್ಕಾ ಮತ್ತು ತಂಡ (ಬೀದರ್) ಪೂಜಾ ಕುಣಿತದ ಮೂಲಕ ಗಮನ ಸೆಳೆದರು. ಸ್ನೇಹಾ ಮತ್ತು ತಂಡ (ಬೀದರ್) ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ನೀಡಿದ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದವರ ಕಣ್ಮನ ಸೆಳೆದವು. ಕಾರ್ಯಕ್ರಮದಲ್ಲಿ ಹಿರಿಯ ಜನಪದ ಕಲಾವಿದರಾದ ಶಂಭುಲಿAಗ ವಾಲ್ದೊಡ್ಡಿ, ಶಂಕರ ಚೊಂಡಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು.