Home ಜಿಲ್ಲೆ ನ.೧೭ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಖಾಸಗಿ ಶಾಲೆಗಳ ಬಂದ್ ಗೆ ಬೆಂಬಲ: ಜಲಾದೆ

ನ.೧೭ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಖಾಸಗಿ ಶಾಲೆಗಳ ಬಂದ್ ಗೆ ಬೆಂಬಲ: ಜಲಾದೆ

ಬೀದರ್: ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳ ಬೇಡಿಕೆಗಳ ಈಡೇರಿಕೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ, ನವೆಂಬರ್ ೧೭ರಂದು ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ಚದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಸಗಿ ಶಾಲೆಗಳು ಹಾಗೂ ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಅಡಳಿತ ಮಂಡಳಿ ಸಂಘ ನಿರ್ಧರಿಸಿದೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ ೧೮ರಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಹೋರಾಟ ನಡೆಸುವುದಾಗಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಅಡಳಿತ ಮಂಡಳಿಯ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಕನ್ನಡ ಶಾಲೆಗಳು ಉಳಿಸಿ- ಶಿಕ್ಷಣ ಉಳಿಸಿ’ ಅಭಿಯಾನದಡಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

೧೯೯೫ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿರುವ ಕ್ಲಿಷ್ಟಕರ ನಿಯಮಗಳನ್ನು ಸರಳೀಕರಣಗೊಳಿಸಬೇಕು. ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿರುವ ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಉಚಿತ ಶಿಕ್ಷಣ ಸೌಲಭ್ಯವನ್ನು ಮರುಜಾರಿಗೊಳಿಸಬೇಕು, ನಿವೃತ್ತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಶಾಲೆಗಳ ನವೀಕರಣ ಪ್ರಕ್ರಿಯೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಮಸ್ಯೆಯಾಗಿ ಪರಿಣಮಿಸುವಂತೆ ಮಾಡಲಾಗಿದೆ. ಅನಗತ್ಯ ನಿಯಮಗಳು ಹಾಗೂ ಷರತ್ತುಗಳಿಂದ ಶಾಲೆಗಳ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬಡ, ದಲಿತ ಹಾಗೂ ಶೋಷಿತ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ನೆರವಾಗಿದ್ದ ಆರ್‌ಟಿಇ ಸೌಲಭ್ಯವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಈ ಯೋಜನೆಯನ್ನು ಮರು ಜಾರಿಗೊಳಿಸುವ ಮೂಲಕ ಎಲ್ಲ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

೧೯೯೫ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳು, ವಿಶೇಷವಾಗಿ ಗಡಿ ಭಾಗದ ಶಾಲೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇಂತಹ ಶಾಲೆಗಳಿಗೆ ಸರ್ಕಾರ ಕೂಡಲೇ ಅನುದಾನ ನೀಡಬೇಕು. ನವೆಂಬರ್ ೧ರಂದು ಮುಖ್ಯಮಂತ್ರಿಗಳು ಅನುದಾನದ ಕುರಿತು ಭರವಸೆ ನೀಡಿದ್ದರೂ ಈವರೆಗೆ ಅಧಿಕೃತ ಘೋಷಣೆ ಹೊರಬಿದ್ದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಮುಖ್ಯಮಂತ್ರಿ ಅವರು ಇಂಗ್ಲಿಷ್ ಮಾಧ್ಯಮ ಶಾಲೆಗಳ ಪ್ರತಿನಿಧಿಗಳೊಂದಿಗೆ ಮಾತ್ರ ಸಭೆ ನಡೆಸಿದ್ದು, ಕನ್ನಡ ಮಾಧ್ಯಮ ಶಾಲೆಗಳ ಸಮಸ್ಯೆಗಳನ್ನು ಕಡೆಗಣಿಸಿದ್ದಾರೆ. ನಾವು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ. ಆದರೆ ಕನ್ನಡ ಶಾಲೆಗಳು ಉಳಿಯಬೇಕು. ಕನ್ನಡ ನಮ್ಮ ಉಸಿರು, ನೆಲ ಮತ್ತು ಜಲವಾಗಿದ್ದು, ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಜಲಾದೆ ಒತ್ತಾಯಿಸಿದರು.

ಅನುದಾನ ರಹಿತ ಖಾಸಗಿ ಶಾಲಾ ಅಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಮಣಗೀರೆ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಸರ್ಕಾರದ ಚಿಂತನೆಗೂ ವಿರೋಧ ವ್ಯಕ್ತಪಡಿಸಿರುವ ಅವರು, ಸರ್ಕಾರಿ ಶಾಲೆಗಳ ನಿರ್ವಹಣೆ ಹಾಗೂ ಶಿಕ್ಷಣದ ಗುಣಮಟ್ಟ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಅದನ್ನು ಖಾಸಗಿಯವರ ಹೆಗಲಿಗೆ ಹಾಕುವ ಬದಲು ಅಗತ್ಯ ಶಿಕ್ಷಕರ ನೇಮಕಾತಿ ಮತ್ತು ಮೂಲ ಸೌಕರ್ಯ ಒದಗಿಸಬೇಕು ಎಂದರು.

ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಬೋಧನೆಯ ಜತೆಗೆ ಬಿಸಿಯೂಟ ಸೇರಿದಂತೆ ಹಲವು ಆಡಳಿತಾತ್ಮಕ ಹಾಗೂ ಲೆಕ್ಕ ಪತ್ರಗಳ ಜವಾಬ್ದಾರಿ ವಹಿಸಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಸಾವಿರಾರು ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ವ್ಯಕ್ತವಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ, ಆರೋಗ್ಯ ಮತ್ತು ವಸತಿ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯ. ಸರ್ವಶಿಕ್ಷಣ ಅಭಿಯಾನದಡಿ ಎಲ್ಲರಿಗೂ ಉಚಿತ ಶಿಕ್ಷಣ ಕಲ್ಪಿಸುವ ಜವಾಬ್ದಾರಿಯನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡುತ್ತಿವೆ. ಇಂತಹ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ವಹಿಸುವ ಕುರಿತು ಸರ್ಕಾರ ಚಿಂತಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ ಮತ್ತು ರಾಜ್ಯ ಸಂಘಟನೆಯ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಬೀದರ್ ಜಿಲ್ಲೆಯ ಎಂಟು ತಾಲ್ಲೂಕುಗಳಿಂದ ಒಂದು ಸಾವಿರಕ್ಕೂ ಹೆಚ್ಚು ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ವ್ಯವಸ್ಥೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಶಿಕ್ಷಣ ತಜ್ಞರು, ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ಬೆಂಬಲ ನೀಡಬೇಕು ಎಂದು ಮಣಗೀರೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಗುರುನಾಥ ರಡ್ಡಿ,, ಜಿಲ್ಲಾ ಘಟಕದ ಸಲಹಾ ಸಮಿತಿ ಸದಸ್ಯರಾದ ಗುಂಡಯ್ಯ ತೀರ್ಥ, ಔರಾದ್ ತಾಲೂಕಾಧ್ಯಕ್ಷ ಗುರುನಾಥ ದೇಶಮುಖ, ಕಮಲನಗರ ತಾಲೂಕಾಧ್ಯಕ್ಷ ರಾಜಕುಮಾರ ಹಮಿಲಪುರೆ, ನೈಟಿಂಗೆಲ್ ಶಾಲೆಯ ದೇವಿದಾಸ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.