
ಕುಣಿಗಲ್, ಜೂ. ೧೩- ಇಲ್ಲಿನ ಪುರಸಭೆ ಮುಖ್ಯಾಧಿಕಾರಿಯಾಗಿ ತಹಶೀಲ್ದಾರ್ ಕರಿಯ ನಾಯಕ್ ಅಧಿಕಾರ ಸ್ವೀಕರಿಸಿದರು.
ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಹುದ್ದೆ ಖಾಲಿ ಇದ್ದು, ನೂತನ ಮುಖ್ಯಾಧಿಕಾರಿ ಬರುವವರೆಗೂ ತಹಶೀಲ್ದಾರ್ ಕರಿಯ ನಾಯಕ್ ಅವರು ಹೆಚ್ಚುವರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಪಟ್ಟಣದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದರು.
ಅಧಿಕಾರಿಗಳು ಸಮರ್ಪಕವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಯಾವುದೇ ದೂರು ದುಮ್ಮಾನಗಳು ಬಾರದಂತೆ ಕೆಲಸ ಮಾಡುವುದರೊಂದಿಗೆ ಅಕ್ರಮವಾಗಿ ಇ-ಖಾತೆ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗವಹಿಸಿದರೆ ಅಂತಹವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಟ್ಟಣದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ನಿಲ್ದಾಣ ಕಾಮಗಾರಿಯನ್ನು ಗುತ್ತಿಗೆದಾರರು ಬೇಗ ಬೇಗ ಪೂರ್ಣಗೊಳಿಸಲು ಮುಂದಾಗಬೇಕು ಹಾಗೂ ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿಗಳು ನಡೆಯುತ್ತಿರುವುದರಿಂದ ಇವುಗಳ ಬಗ್ಗೆಯೂ ಸಹ ಇಂಜಿನಿಯರ್ ಗಮನ ಹರಿಸುವುದರೊಂದಿಗೆ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ವರ್ಗಗಳ ಕಾಲೋನಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅಲ್ಲಿಗೆ ಅಗತ್ಯವಾಗಿ ಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ಹೇಳಿದರು.
ಜತೆಗೆ ಕುಡಿಯುವ ನೀರಿನ ಪಂಪ್ ಹೌಸ್ ಸೇರಿದಂತೆ ಈಗ ನಡೆಯುತ್ತಿರುವ ಒಳಚರಂಡಿ ಹಾಗೂ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಗಳ ಸ್ಥಳ ಪರಿಶೀಲನೆ ಯಾವ ಹಂತದಲ್ಲಿ ಕಾಮಗಾರಿ ನಡೆಯುತ್ತಿದೆ ಎಂಬುದನ್ನು ಖುದ್ದಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.




























