Home ಜಿಲ್ಲೆ ಬೆಂಗಳೂರು ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ಯಶಸ್ವಿ

ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ಯಶಸ್ವಿ

ಮಾಲೂರು, ನ.೯- ಸಂಸದೀಯ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಲೂರು ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


ಜಿಲ್ಲಾ ಆಡಳಿತ, ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ೨೦ ಪ್ರೌಢಶಾಲೆಗಳು, ೮ ಪಿಯು ಕಾಲೇಜುಗಳು ಹಾಗೂ ೩ ಪ್ರಥಮ ದರ್ಜೆ ಕಾಲೇಜುಗಳ ಒಟ್ಟು ೧೫೦ ವಿದ್ಯಾರ್ಥಿಗಳು ಭಾಗವಹಿಸಿ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕಾರ್ಯವೈಖರಿ ಕುರಿತು ತಮ್ಮ ಅರಿವು ಮತ್ತು ಕೌಶಲ್ಯ ಪ್ರದರ್ಶಿಸಿದರು.


ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಆಡಳಿತ ಪಕ್ಷದ ಸದಸ್ಯರು ಹಾಗೂ ಪ್ರತಿಪಕ್ಷದ ಸದಸ್ಯರ ಪಾತ್ರಗಳನ್ನು ನಿರ್ವಹಿಸಿ ವಾದ-ಪ್ರತಿವಾದ ಮಂಡಿಸಿದರು. ಆಡಳಿತ ಪಕ್ಷದ ಉತ್ತರಗಳು ಮತ್ತು ಪ್ರತಿಪಕ್ಷದ ಪ್ರಶ್ನೆಗಳು ನೈಜ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಹೋಲಿಸು ವಂತಿದ್ದು, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು.


ಕಾರ್ಯಕ್ರಮದ ಆರಂಭದಲ್ಲಿ ಸಭಾಧ್ಯಕ್ಷರು, ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರು ಹಾಗೂ ಗೃಹ, ಶಿಕ್ಷಣ, ಆರೋಗ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ ಹಾಗೂ ಅರಣ್ಯ ಸಚಿವರ ಆಯ್ಕೆ ಪ್ರಕ್ರಿಯೆ ನಡೆಯಿತು. ನಂತರ ಸದಸ್ಯರು ತಮ್ಮ ನಿಗದಿತ ಆಸನಗಳಲ್ಲಿ ಕುಳಿತು ಸಂಸತ್ ಕಲಾಪದಲ್ಲಿ ಭಾಗವಹಿಸಿದರು. ಸಂತಾಪ ಸೂಚನೆ, ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆಯ ಚರ್ಚೆ, ಗಮನ ಸೆಳೆಯುವ ಸೂಚನೆ, ವಿಧೇಯಕ ಮಂಡನೆ ಹಾಗೂ ಅಲ್ಪಾವಧಿ ಚರ್ಚೆಗಳ ಮೂಲಕ ವಿದ್ಯಾರ್ಥಿಗಳು ಪ್ರಸ್ತುತ ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಪ್ರತಿಪಕ್ಷದ ಸದಸ್ಯರು ಸರ್ಕಾರವನ್ನು ಪ್ರಶ್ನಿಸಿ, ಆಡಳಿತ ಪಕ್ಷದ ಸದಸ್ಯರು ಸಮರ್ಪಕ ಉತ್ತರ ನೀಡಿದ ರೀತಿಯು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಎಂ.ವಿ. ರೂಪ, ಭಾರತವು ಬಲಿಷ್ಠ ಪ್ರಜಾಪ್ರಭುತ್ವದೊಂದಿಗೆ ಸಂಸದೀಯ ಆಡಳಿತ ವ್ಯವಸ್ಥೆ ಹೊಂದಿದ್ದು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ದೇಶದ ಆಡಳಿತದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.


ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಸದೀಯ ಪದ್ಧತಿ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಮತ್ತು ಚರ್ಚಾ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿ ಎಂದು ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ವಿದ್ಯಾರ್ಥಿ ಹಂತದಲ್ಲಿಯೇ ಅರಿವು ಮೂಡಿಸಲು ಯುವ ಸಂಸತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.


ಸಂಸದೀಯ ವ್ಯವಸ್ಥೆಯಲ್ಲಿ ಆರೋಗ್ಯಕರ ಚರ್ಚಾ ವಾತಾವರಣ ನಿರ್ಮಾಣ ಮಾಡುವುದು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.


ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ೧೪ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ
ಗೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ. ಕೆಂಪಯ್ಯ, ಸಮಾಜ ಕಲ್ಯಾಣ ಇಲಾಖೆಯ ನಾಯಕ ನಿರ್ದೇಶಕ ಶಿವಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಟಿ. ವೆಂಕಟಸ್ವಾಮಿ, ಮಾಸ್ತಿ ಕೆಪಿಎಸ್ ಕಾಲೇಜಿನ ಪ್ರಾಂಶುಪಾಲ ರಾಮಣ್ಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸೋಮಶೇಖರ್, ಮಾಸ್ತಿ ವಿದ್ಯಾಪನ ಲಾ ಕಾಲೇಜಿನ ಪ್ರಾಂಶುಪಾಲೆ ಜಾಸ್ಮಿನ್, ಉಪನ್ಯಾಸಕರಾದ ಅನಂತರಾಜು, ಗಿರೀಶ್, ಐ.ಆರ್.ಟಿ. ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.