
ಶಿಡ್ಲಘಟ್ಟ:-ಮೇ,೦೬-ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಂಡು ಕ್ರಮವಹಿಸಿ, ಕೊಳವೆ ಬಾವಿಗಳನ್ನು ಕೊರೆಸಲು ಅವಕಾಶವಿದ್ದರೆ ಆದ್ಯತೆ ಮೇರೆಗೆ ಜಿಲ್ಲಾ ಪಂಚಾಯಿತಿಗೆ ಅನುಮೋದನೆಗೆ ಕಳುಹಿಸಿ, ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಹಂತದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಗೆ ತಹಶೀಲ್ದಾರ್ ಗಗನಸಿಂಧು ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಡಳಿತಾಧಿಕಾರಿ ಅಬಿದ ಎಸ್.ಎಸ್, ತಹಶೀಲ್ದಾರ್ ಗಗನಸಿಂಧು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ನೇತೃತ್ವದಲ್ಲಿ ತಾಲ್ಲೂಕಿನ ಸಮಸ್ಯೆಗಳ ಕುರಿತು ಚರ್ಚಿಸಲು ಟಾಸ್ಕ್ ಫೋರ್ಸ್ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಅದೇ ರೀತಿಯಾಗಿ ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿರುವುದರಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ಅಥವಾ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಿ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಕ್ರಮವಹಿಸುವ ಜೊತೆಗೆ ರಿಪೇರಿಗೆ ಆದ್ಯತೆ ನೀಡಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಸಾಮಾನ್ಯ ಸಭೆಯನ್ನು ಹಮ್ಮಿಕೊಂಡಿದ್ದು ಏಪ್ರಿಲ್ ೨೦೨೬ ರ ಮಾಹೆಯ ಅಂತ್ಯದ ಪ್ರಗತಿಯ ಬಗ್ಗೆ ಹಾಗೂ ೨೦೨೬-೨೭ ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ನ ಕ್ರಿಯಾಯೋಜನೆಯನ್ನು ಆಡಳಿತಾಧಿಕಾರಿ ಅಬಿದ.ಎಸ್.ಎಸ್, ತಾಲ್ಲೂಕು ಪಂಚಾಯಿತಿ ಶಿಡ್ಲಘಟ್ಟ ಹಾಗೂ ಜಂಟಿ ನಿರ್ದೇಶಕರು ಕೃಷಿ ಇಲಾಖೆ ಚಿಕ್ಕಬಳ್ಳಾಪುರ ಇವರ ನೇತೃತ್ವದಲ್ಲಿ ಹಮ್ಮಿಕೊಂಡು ಸಭೆಯಲ್ಲಿ ಚರ್ಚಿಸಲಾಯಿತು.
ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ,ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಭಾಗವಹಿಸಿದ್ದರು.


























