Home ಜಿಲ್ಲೆ ಶಿಕ್ಷಕರು ರಾಷ್ಟ್ರ ರಕ್ಷಕರಿದ್ದಂತೆ: ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ

ಶಿಕ್ಷಕರು ರಾಷ್ಟ್ರ ರಕ್ಷಕರಿದ್ದಂತೆ: ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ

ಸಂಜೆವಾಣಿ ವಾರ್ತೆ,
ವಿಜಯಪುರ, ಸೆ. ೭: ಶಿಕ್ಷಕರು ರಾಷ್ಟ್ರದ ರಕ್ಷಕರಿದ್ದಂತೆ. ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸಲು ಶಿಕ್ಷಕರು ಶ್ರಮಿಸುತ್ತಾರೆ. ವಿದ್ಯೆ ನೀಡುವುದು ಪವಿತ್ರ ಕಾರ್ಯವಾಗಿದ್ದು, ನಮಗೆ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಪ್ರಗತಿ ಶಿಕ್ಷಣದಿಂದಲೇ ಸಾಧ್ಯವಾಗಿದ್ದು, ಶಿಕ್ಷಕರ ಕೀರ್ತಿ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ಶಿಕ್ಷಕರ ವೃತ್ತಿಗೆ ಗೌರವ ನೀಡುವ ಮೂಲಕ ನೈತಿಕತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಶಿಕ್ಷಕರು ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದು, ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣವೇ ಮೂಲ ಕಾರಣವಾಗಿದೆ. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮವಾಗಿದ್ದು, ಮುಂದಿನ ದಿನಗಳಲ್ಲೂ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಶ್ರಮಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯಿತಿಯಿAದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಮೇಲಾಧಿಕಾರಿಗಳು ಸಹಕಾರ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಡಯಟ್ ಪ್ರಾಚಾರ್ಯೆ ಎಸ್.ಎಸ್. ಮುಜಾವರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲೆಯ ೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರು ಹಾಗೂ ನಗರ ವಲಯದ ೧೨ ಶಿಕ್ಷಕರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ವಸಂತ ಹೊನಮೋಡೆ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಣಮಂತ ಕೊಣದಿ, ನಗರ ಘಟಕದ ಅಧ್ಯಕ್ಷ ಜುಬೇರ ಕೆರೂರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ ಬಿರಾದಾರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.