ದಿ. 21 ರಂದು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬಾಗಲಕೋಟೆ: ಜೂ8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಜೂನ್ 21 ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.


ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 6 ರಿಂದ 8.30 ಗಂಟೆವರೆಗೆ ಕಾರ್ಯಕ್ರಮ ಜರುಗಲಿದೆ. ಸೇವಾದಳದ ಮಹೇಶ ಪತ್ತಾರ ಯೋಗ ತರಬೇತಿ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಯೋಗ ನಿರತ ಸಂಘ ಸಂಸ್ಥೆಗಳು, ಎನ್‍ಸಿಸಿ ಕೆಡೆಟ್, ಹೋಮ್‍ಗಾಡ್ರ್ಸ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎನ್‍ವಾಯ್.ಕೆ, ಸೇವಾದಳದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಜಿಲ್ಲಾದಿಕಾರಿಗಳು ಮನವಿ ಮಾಡಿದರು.


ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಬರುವ ಶಾಲೆಯ ಮಕ್ಕಳನ್ನು ಈ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಲಾಯಿತು. ನವನಗರದ ವ್ಯಾಪ್ತಿಯ ವಿವಿಧ ಇಲಾಖೆಯಡಿಯಲ್ಲಿರುವ ವಸತಿ ಶಾಲೆಗಳ ಮಕ್ಕಳೂ ಸಹ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಳ್ಳುವಂತೆ ಮಾಡಲು ತಿಳಿಸಿದರು.


ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರೋಟೋಕಾಲ್ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಲು ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣವನ್ನು ಸ್ವಚ್ಛವಾಗಿಡುವಂತೆ ನಗರಸಭೆ ಆಯುಕ್ತರಿಗೆ ತಿಳಿಸಿದರು. ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಯೋಗ ಮಾಡಲು ಸಡಿಲು ಬಿಳಿ ಬಣ್ಣದ ಬಟ್ಟೆ, ಟ್ಯಾಶೂಟ್ ಹಾಗೂ ಹಾಸಿಗೆ ತರುವಂತೆ ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು.


ಯೋಗ ದಿನಾಚರಣೆ ಅಂಗವಾಗಿ ಯೋಗ ಸಂಗಮ, ಯೋಗ ಪಾರ್ಕ, ಯೋಗ ಧನುಷ್, ಹರಿಸು ಯೋಗ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದರು. ಯುವ ಪೀಳಿಗೆಯಲ್ಲಿ ಯೋಗದ ಕುರಿತು ಉತ್ಸಾಹವನ್ನು ಹೆಚ್ಚಿಸಲು ಯೋಗ ರೀಲ್ಸ್, ಯೋಗ ಪೊಸ್ಟರ್, ಯೋಗ ಕ್ವಿಜ್, ಯೋಗ ಪ್ರಬಂಧ ಸ್ಪರ್ಧೆ, ಯೋಗ ಜಿಂಗಲ್ಸ್ ಹಾಗೂ ಇನ್ನೀತರ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು.


ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೇಖರಯ್ಯ ಮಠ ಅವರು ಕಾರ್ಯಕ್ರಮದ ರೂಪು-ರೇಶೆಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಪಂಚಾಯತ ಸಹಾಯಕ ನಿರ್ದೇಶಕ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಆಯುಷ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಅಕ್ಕಮಹಾದೇವಿ ಗಾಣಿಗೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.