ಕೇಂದ್ರದ ಮಲತಾಯಿ ಧೋರಣೆ: ಸಿಎಂ ಕಿಡಿ

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು ೭೦ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದ್ದಾರೆ.

ಬೆಂಗಳೂರು, ನ. ೧- ಕೇಂದ್ರ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆಯನ್ನು ತೋರುತ್ತಿದೆ ಎಂದು ಅಸಮಾಧಾನ ಹೊರ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಲು ಹೊಸ ನೀತಿಯನ್ನು ತರುವ ಘೋಷಣೆಯನ್ನು ಮಾಡಿದ್ದಾರೆ.


ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ತೋರುತ್ತಿದೆ. ೪.೫ ಲಕ್ಷ ಕೋಟಿ ರೂಪಾಯಿಗಳಿಂತ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ನಮಗೆ ಬಿಡಿಗಾಸು ಕೊಟ್ಟು ಪ್ರತಿವರ್ಷ ಸಾವಿರಾರು ಕೋಟಿ ರೂ.ಗಳನ್ನು ವಂಚಿಸುತ್ತಿದೆ ಎಂದು ದೂರಿದರು.


ಹಿಂದಿ ಭಾಷೆ ಹೇರಿಕೆ ಮಾಡಲು ನಿರಂತರ ಹುನ್ನಾರ ನಡೆಯುತ್ತಿದೆ. ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶ ಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದರು.


ರಾಜ್ಯದ ಅಭಿವೃದ್ಧಿಗೆ ಪೂರಕವಾಗಬೇಕಿದ್ದ ಯೋಜನೆಗಳನ್ನು ಕೊಡದೆ ಕರ್ನಾಟಕಕ್ಕೆ ವಂಚಿಸಲಾಗುತ್ತಿದೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದ್ದರೂ ನೀಡಬೇಕಾದ ಅನುದಾನವನ್ನು ಕೊಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಹರಿಹಾಯ್ದರು.


ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಒಕ್ಕೊರಲಿನಿಂದ ಖಂಡಿಸಬೇಕಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ಸರ್ಕಾರ ಹೋರಾಟ ನಡೆಸುತ್ತಿದೆ. ಜನಸಮುದಾಯವೂ ಕೂಡ ಗಂಭೀರವಾಗಿ ಪ್ರಶ್ನಿಸಬೇಕಾದ ಅನಿವಾರ್ಯತೆ ಉದ್ಭವಿಸಿದೆ. ಬಲಿಷ್ಠ ಒಕ್ಕೂಟ ವ್ಯವಸ್ಥೆಯ ಕನಸು ನಮ್ಮ ಸಂವಿಧಾನ ಪಿತೃಗಳದ್ದಾಗಿತ್ತು. ಇದನ್ನು ಕಳೆದ ಕೆಲವು ವರ್ಷಗಳಿಂದ ಛಿದ್ರಗೊಳಿಸಿ ರಾಜ್ಯಗಳ ಅಧಿಕಾರವನ್ನು ಕಬ್ಜ ಮಾಡುವ ವಸಾಹತುವಾದಿ ಮನೋಭಾವ ಕಾಣುತ್ತಿದೆ. ಕೇಂದ್ರದ ಈ ತಾರತಮ್ಯಗಳ ವಿರುದ್ಧ ಇಡೀ ನಾಡು ಸಂವಿಧಾನಾತ್ಮಕವಾಗಿ ನಿಂತು ಪ್ರತಿಭಟಿಸದೇ ಹೋದರೆ ನಮ್ಮನ್ನು ಅಪೋಷಣ ತೆಗೆದುಕೊಳ್ಳಲಾಗುತ್ತಿದೆ ಎಂಬ ಎಚ್ಚರಿಕೆಯ ಮಾತುಗಳನ್ನು ಆಡಿದರು.


ಕರ್ನಾಟಕ ವಿರೋಧಿಯಾದ ಎಲ್ಲವನ್ನೂ ವಿರೋಧಿಸಲೇಬೇಕಿದೆ. ನಾಡಿನ ಇತಿಹಾಸ, ಪರಂಪರೆ, ನೆನಪುಗಳನ್ನು ಹೊಸ ತಲೆಮಾರುಗಳಲ್ಲಿ ಮೂಡಿಸಿ ಅವರಲ್ಲಿ ಅಭಿಮಾನ ಮೂಡಿಸೋಣ. ನಮಗಿರುವ ಸವಾಲುಗಳನ್ನೆ ಅವಕಾಶಗಳನ್ನಾಗಿ ಮಾರ್ಪಡಿಸುವ ಶಕ್ತಿ ನಮ್ಮ ಯುವ ತಲೆಮಾರಿಗಿದೆ. ಯುವ ತಲೆಮಾರು ಎದ್ದುನಿಂತು ಕನ್ನಡ ಮತ್ತು ಕರ್ನಾಟಕವನ್ನು ಜಗತ್ತಿನ ಮುಂದುವರೆದ ಸಮಾಜದ ಮಟ್ಟಕ್ಕೆ ನಿಲ್ಲಿಸಬೇಕಿದೆ ಎಂದರು.


ಸಾವಿರಾರು ವರ್ಷಗಳಷ್ಟು ಹಳೇ ಇತಿಸಾಹಗಳುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ. ಶಿಕ್ಷಣದಲ್ಲಿ ಕನ್ನಡ ಭಾಷೆಯ ನಿರ್ಲಕ್ಷ್ಯವೂ ಹಲವು ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಜಗತ್ತಿನ ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಇಂದು ಕನ್ನಡದ ಭಾಷೆಗೆ ಬಂದಿದೆ. ಮುಂದುವರೆದ ದೇಶದ ಮಕ್ಕಳು ತಮ್ಮ ತಾಯಿ ನುಡಿಯಲ್ಲಿ ಯೋಚಿಸುತ್ತಾರೆ, ಕಲಿಯುತ್ತಾರೆ ಮತ್ತು ಕನಸು ಕಾಣುತ್ತಾರೆ. ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿ ಇದೆ. ಇಂಗ್ಲೀಷ್, ಹಿಂದಿಯಂತಹ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ಭಾಷೆಯ ಕಾರಣಕ್ಕೆ ದುರ್ಬಲಗೊಳಿಸುತ್ತಿವೆ. ಹಾಗಾಗಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕಾದ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸುವುದಾಗಿ ಅವರು ಹೇಳಿದರು.
ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆ ಇರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿರುವುದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಒಂದು ನಾಡನ್ನು ಕಟ್ಟುವುದು ಸರಳ ಸಂಗತಿಯಲ್ಲ. ನಾಡೊಂದರ ಸಮಗ್ರ ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ, ವಿದ್ಯುತ್, ರೈಲು, ವಿಮಾನ, ಸುಸಜ್ಜಿತ ಕಟ್ಟಡಗಳಷ್ಟೇ ಅಲ್ಲ, ನಾಡಿನ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ, ತಮ್ಮ ಜತೆಯಲ್ಲಿನ ಮಕ್ಕಳ ಭಾಷೆ, ಬದುಕು, ಧರ್ಮ, ಜಾತಿ ಹಾಗೂ ಇನ್ನಿತ್ಯಾದಿ ಖಿನ್ನತೆಗಳನ್ನು, ಸಹನೆಯಿಂದ ನೋಡುವುದನ್ನು ಕಲಿಸುವುದು ಮುಖ್ಯ. ಇದರ ಜತೆಗೆ ಜಗತ್ತಿನ ಮುಖ್ಯ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ರೀತಿಯ ಅನ್ವೇಷಣೆಗಳಿಗೆ ಸರಿಸಾಟಿಯಾಗಿ ನಿಲ್ಲುವಂತಹ ರೀತಿಯಲ್ಲಿ ಆಲೋಚನೆಗಳನ್ನು ಕಲಿಸುವ ವಾತಾವರಣವೂ ಬಹಳ ಮುಖ್ಯ ಎಂದರು.


ರಾಜ್ಯದಲ್ಲಿ ೮೦೦ ಕನ್ನಡ ಶಾಲೆಗಳು ಮತ್ತು ೧೦೦ ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲೂ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ ಎಂದು ಅವರು ಹೇಳಿದರು.


ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು ೩ ಸಾವಿರ ಸರ್ಕಾರಿ ಶಾಲೆಗಳಿವೆ. ಶಾಲಾ ಶಿಕ್ಷಣವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ೨೫೦೦ ಕೋಟಿ ರೂ. ವೆಚ್ಚದಲ್ಲಿ ೮೦೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು ೪ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.


ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ ೧೮೦ ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ ೧೫೦೦ ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ೪೮೩ ಕೋಟಿ ರೂ. ವೆಚ್ಚದಲ್ಲಿ ೧೦೦ ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.


ಕರ್ನಾಟಕ ಏಕೀಕರಣಕ್ಕೆ ಹೋರಾಟ ನಡೆಸಿದ ಎಲ್ಲಾ ಮಹನೀಯರನ್ನು ಸ್ಮರಿಸಿದ ಅವರು, ಇವರೆಲ್ಲರ ಹೋರಾಟದ ಫಲವೇ ಇಂದಿನ ಕರ್ನಾಟಕ ಎಂದರು.
ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಈ ವರ್ಷ ೬೫ ಸಾವಿರ ಕೋಟಿಗೂ ಹೆಚ್ಚಿನ ಸಂಪನ್ಮೂಲಗಳನ್ನು ವಿನಿಯೋಗಿಸುತ್ತಿದ್ದೇವೆ. ಕಾಲ ಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ. ಹೊಸದಾಗಿ ೧೮ ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಹೇಳಿದರು.


ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಪ್ರತ್ಯೇಕ ವಸತಿ ಶಾಲೆಗಳನ್ನು ಸ್ಥಾಪಿಸಿ ಕ್ಯಾನ್ಸರ್‌ನಿಂದ ಬಾಧಿತರಾದ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.


ಇತ್ತೀಚೆಗೆ ತಾನೇ ಪ್ರೊ. ಸುಖದೇವ್ ತೋರಟ್ ರವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ವರದಿಯನ್ನು ನೀಡಿದೆ. ರಾಜ್ಯಕ್ಕೆ ಆದ ಶಿಕ್ಷಣ ನೀತಿಯು ರಚನೆಯಾಗಿರುವುದು ಇದೇ ಮೊದಲು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.


ರಾಜ್ಯವು ಅಭಿವೃದ್ಧಿಯಲ್ಲೂ ಮುಂದಿದೆ. ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ತಲಾದಾಯದಲ್ಲೂ ಹೆಚ್ಚಿನ ಪ್ರಗತಿ ಸಾಧಿಸಿದೆ ಎಂದ ಅವರು, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಈ ವರ್ಷ ವಿಶೇಷವಾಗಿ ೮ ಸಾವಿರ ಕೋಟಿ ಅನುದಾನವನ್ನು ನೀಡಿದ್ದೇವೆ ಎಂದು ಹೇಳಿದರು.


ನಮ್ಮ ಹೊಸ ತಲೆಮಾರಿನ ಮೇಲೆ ಈ ನಾಡನ್ನು ಮುಂದುವರೆಸುವ ಮತ್ತು ಸಮೃದ್ಧಿಗೊಳಿಸುವ ಮಹತ್ತರವಾದ ಜವಾಬ್ದಾರಿ ಇದೆ. ನಮ್ಮ ಹಿರಿಯರು ಬಹಳ ತ್ಯಾಗ ಮಾಡಿ ಈ ನಾಡನ್ನು ಕಟ್ಟಿದ್ದಾರೆ. ನಮ್ಮ ಗುರಿ ಅತ್ಯಂತ ಉದಾತ್ತವಾದ, ವೈಜ್ಞಾನಿಕವಾದ ವೈಚಾರಿಕ ಮನೋಭಾವದ ಮಾನವೀಯತೆಯ ನಾಡನ್ನು ಕಟ್ಟುವುದು ಮುಖ್ಯ ಎಂದು ಅವರು ತಿಳಿಸಿದರು.

ಎಐನಿಂದ ಉದ್ಯೋಗ ನಷ್ಟ, ಸವಾಲು ಎದುರಿಸಲು ಬದ್ಧ


ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ನಿಂದ (ಎಐ) ಕನ್ನಡದ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದಂತೆ ಸಿದ್ಧಪಡಿಸಲು ಸರ್ಕಾರ ಬದ್ಧವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.


ಮಾಹಿತಿ ತಂತ್ರಜ್ಞಾನ ಯುಗ ಆರ್ಟಿಫಿಶಿಯಲ್ ಯುಗವಾಗಿ ಬದಲಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದರ ಭಾಗವಾಗಿ ಎಐನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದಂತೆ ಸಿದ್ಧಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.


ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಅವರು ಕರೆಯಿತ್ತರು.


ಹೊಸ ತಲೆಮಾರು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಮೊಬೈಲ್ ಫೋನ್, ಇಂಟರ್‌ನೆಟ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ಗಳು ಇಬ್ಬಾಗ ಖಡ್ಗದಂತೆ ಕೆಲಸ ಮಾಡತ್ತಿವೆ. ಶೇ. ೨೫ ರಷ್ಟು ಅನುಕೂಲವಾಗಿದೆ ಎಂದು ಭಾವಿಸುವಾಗಲೇ ಶೇ. ೭೫ ರಷ್ಟು ಪ್ರಮಾಣದಲ್ಲಿ ಆತಂಕವನ್ನು ಉಂಟು ಮಾಡುತ್ತಿದೆ.

ಮಕ್ಕಳ ಕುತೂಹಲಗಳನ್ನು, ಮುಗ್ದತೆಯನ್ನು ಇವು ಕಿತ್ತುಕೊಳ್ಳುತ್ತಿವೆ. ಇದರಿಂದಾಗಿ ಬೆಳೆಯಬೇಕಾದ ಮಕ್ಕಳ ಮನಸ್ಸು ಬಂಜರು ಆಗಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದರು.