
ಸಂಜೆವಾಣಿ ವಾರ್ತೆ,
ವಿಜಯಪುರ, ನ.26:ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಕಿರುಕುಳ ತಡೆಗಟ್ಟಲು ಹಾಗೂ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ಕಲ್ಪಿಸಲು ಪೋಷ್ ಕಾಯ್ದೆ-2013 ಮಹತ್ವದ ಕಾನೂನು ರಕ್ಷಣೆಯನ್ನು ಒದಗಿಸಿದೆ. ಕಾಯ್ದೆಯ ಉದ್ದೇಶ, ನಿಬಂಧನೆಗಳು ಮತ್ತು ದೂರು ಸಲ್ಲಿಸುವ ವಿಧಾನಗಳ ಕುರಿತು ಪ್ರತಿಯೊಬ್ಬ ಉದ್ಯೋಗಿ ಹಾಗೂ ಸಂಸ್ಥೆಯ ಮುಖ್ಯಸ್ಥರು ಅರಿವು ಹೊಂದಿರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸ್ಥಳೀಯ ಮತ್ತು ಆಂತರಿಕ ದೂರು ನಿವಾರಣಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರಿಗಾಗಿ ನ.25ರಂದು ಆಯೋಜಿಸಿದ್ದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ನಿಷೇಧ ಮತ್ತು ನಿವಾರಣೆ ಅಧಿನಿಯಮ-2013ರ ಕಾಯ್ದೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಕಿರುಕುಳ ತಡೆಗಟ್ಟುವುದು ಪ್ರತಿಯೊಂದು ಸಂಸ್ಥೆಯ ಜವಾಬ್ದಾರಿಯಾಗಿದೆ. ಮಹಿಳೆಯರ ಘನತೆ, ಗೌರವ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಂತರಿಕ ದೂರು ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ದೂರು ಸಲ್ಲಿಸಲು ಪೂರಕ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೋಷ್ ಕಾಯ್ದೆ-2013ರ ಉದ್ದೇಶ, ವ್ಯಾಪ್ತಿ ಮತ್ತು ಪ್ರಮುಖ ನಿಬಂಧನೆಗಳು, ದೂರು ಸಲ್ಲಿಸುವ ವಿಧಾನ ಹಾಗೂ ಕಾನೂನು ಪರಿಹಾರಗಳ ಕುರಿತು ಮಾಹಿತಿ ನೀಡಲಾಯಿತು. ಆಂತರಿಕ ದೂರು ಸಮಿತಿಯ ಪಾತ್ರ ಮತ್ತು ಜವಾಬ್ದಾರಿಗಳು, ದೂರುಗಳ ವಿಚಾರಣೆ ಪ್ರಕ್ರಿಯೆ, ಮಹಿಳೆಯರ ಸುರಕ್ಷತೆ ಮತ್ತು ಗೌರವದ ರಕ್ಷಣೆ ಕುರಿತು ವಿವರಿಸಲಾಯಿತು.
ಅಲ್ಲದೆ, ಕೆಲಸದ ಸ್ಥಳದಲ್ಲಿ ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವುದು, ಮುಕ್ತ ವಾತಾವರಣ ನಿರ್ಮಿಸುವುದು ಹಾಗೂ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಉದ್ಯೋಗದಾತರು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಸಂತೋಷ್ ಕುಮಾರ್ ಹೆಚ್ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಿರ್ಮಲಾ ಎಚ್. ಸುರಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಶ್ವೇತಾ ಪಾಟೀಲ್ ಉಪಸ್ಥಿತರಿದ್ದರು.



















