Home ಜಿಲ್ಲೆ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಚನ್ನಾರೆಡ್ಡಿ ಪಾಟೀಲ್

ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಚನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಮಾಧ್ಯಮಗಳು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜವಾಬ್ದಾರಿ ಹೊಂದಿವೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದಗ್ರಹಣ, ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಕ್ಷೇತ್ರವು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಜಾಗೃತಿ ಮೂಡಿಸುವ ಜತೆಗೆ ಆಡಳಿತ ವ್ಯವಸ್ಥೆಯನ್ನು ಜವಾಬ್ದಾರಿಯುತವಾಗಿಡುವ ಕೆಲಸ ಮಾಡುತ್ತಿದೆ. ನಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸುವಾಗ ಮತ್ತು ಪ್ರಸಾರ ಮಾಡುವಾಗ ಪತ್ರಕರ್ತರು ಹೆಚ್ಚಿನ ಜವಾಬ್ದಾರಿ ಹಾಗೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಅಭಿವೃದ್ಧಿಗೆ ಮಾಧ್ಯಮಗಳ ಸಹಕಾರ ಅಗತ್ಯಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರ್ಡಿಯಾ ಮಾತನಾಡಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಸ್ಯೆಗಳನ್ನು ಬೆಳಕಿಗೆ ತರುವುದರ ಜೊತೆಗೆ ಪರಿಹಾರಕ್ಕೆ ಪೂರಕ ಸಲಹೆಗಳನ್ನು ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದರು.
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಯಾದಗಿರಿ ಜಿಲ್ಲೆಯ ಬೆಳವಣಿಗೆಯಲ್ಲಿ ಪತ್ರಕರ್ತರ ಕೊಡುಗೆ ಗಮನಾರ್ಹವಾಗಿದೆ. ವಿವಿಧ ಅಭಿವೃದ್ಧಿ ಯೋಜನೆಗಳು ಜಿಲ್ಲೆಗೆ ತಲುಪುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸಿವೆ ಎಂದು ಹೇಳಿದರು.
ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಆಡಳಿತ ವ್ಯವಸ್ಥೆಗೆ ಪ್ರಶ್ನೆ ಕೇಳುವ ಪ್ರತಿಪಕ್ಷದ ಜವಾಬ್ದಾರಿಯನ್ನು ಮಾಧ್ಯಮಗಳು ಸಮರ್ಥವಾಗಿ ನಿಭಾಯಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಸಮಾಜದ ಕನ್ನಡಿಯಾಗಿ ಮಾಧ್ಯಮ ಕ್ಷೇತ್ರ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಅದರ ಪಾತ್ರ ಅನನ್ಯವಾಗಿದೆ ಎಂದು ಹೇಳಿದರು.

ಅಂತರರಾಷ್ಟ್ರೀಯ ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಪಾಧ್ಯಕ್ಷ ಗುಂಡಪ್ಪ ಕಲಬುರಗಿ ಹಾಗೂ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುಭಾಷಚಂದ್ರ ಕೌಲಗಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷ ಇಂದೂಧರ ಸಿನ್ನೂರ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ, ಉದ್ಯಮಿಗಳಾದ ಮಲ್ಲಿಕಾರ್ಜುನ ಸಿರಗೋಳ, ದಿನೇಶ್ ಧೋಕಾ, ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ, ಪಿಎಸ್‌ಐ ಹೇಮಾವತಿ, ಜಿಲ್ಲಾ ಉಪಾಧ್ಯಕ್ಷ ದಿನೇಶ್, ಕಾರ್ಯದರ್ಶಿ ಕು ದಾನ್ ಸಾಬ್, ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲಿಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ. ಕಮಲಾ ಇಂದೂಧರ ಸಿನ್ನೂರ ಅವರ ‘ಅಕ್ಕಮಹಾದೇವಿ’ ಕೃತಿ ಬಿಡುಗಡೆ ಮಾಡಲಾಯಿತು. ಹಿರಿಯ ಪತ್ರಕರ್ತ ಮಲ್ಲಿಕಾರ್ಜುನರೆಡ್ಡಿ ಹತ್ತಿಕುಣಿ, ಪತ್ರಕರ್ತ ವೀರೇಶ್ ಹಾಗೂ ಪತ್ರಿಕೆ ವಿತರಕರಾದ ಪ್ರವೀಣ ಮತ್ತು ವಿಷ್ಣು ಅವರನ್ನು ಸನ್ಮಾನಿಸಲಾಯಿತು.

ಖಜಾಂಚಿ ನಾಗಪ್ಪ ಮಾಲಿಪಾಟೀಲ್ ಸ್ವಾಗತಿಸಿದರು. ರಿಯಾಜ್ ಪಟೇಲ್ ಕಾರ್ಯಕ್ರಮ ನಿರೂಪಿಸಿದರು. ಮಹೇಶ ಶಿರವಾಳ ತಂಡ ಪ್ರಾರ್ಥನೆ ನೆರವೇರಿಸಿತು. ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳು, ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ತಂತ್ರಜ್ಞಾನದಿAದ ಕ್ಷಣಾರ್ಧದಲ್ಲೇ ಸುದ್ದಿ ತಲುಪುವ ಯುಗ: ಗಂಗಾಧರ ಮೊದಲಿಯಾರ್

ಟಿಎಸ್‌ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್ ವಿಶೇಷ ಉಪನ್ಯಾಸ ನೀಡಿ, ಪತ್ರಿಕಾರಂಗವು ಕಾಲಾನುಗುಣವಾಗಿ ಮಹತ್ತರ ಬದಲಾವಣೆ ಕಂಡಿದೆ. ಹಿಂದೆ ದೇಶ-ವಿದೇಶಗಳ ಮಾಹಿತಿಗಾಗಿ ಜನರು ಪತ್ರಿಕೆಗಳನ್ನೇ ಅವಲಂಬಿಸುತ್ತಿದ್ದರು. ಆದರೆ ಈಗ ಟಿವಿ, ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಣಾರ್ಧದಲ್ಲಿ ಮಾಹಿತಿ ಲಭ್ಯವಾಗುತ್ತಿದೆ. ಆಧುನಿಕ ತಂತ್ರಜ್ಞಾನ ಪತ್ರಕರ್ತರ ಕೆಲಸವನ್ನು ಸುಲಭಗೊಳಿಸಿದ್ದರೂ, ಜವಾಬ್ದಾರಿ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವುದು ಇಂದಿನ ಪತ್ರಕರ್ತರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು.