
ಕಲಬುರಗಿ:ಏ.೬: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರಯ ಸೇವಾ ಯೋಜನೆ (ರಾ.ಸೇ.ಯೋಜನೆ) ಸಂಯುಕ್ತಾಶ್ರಯದಲ್ಲಿ ೨೦೨೫-೨೦೨೬ನೇ ಸಾಲಿನ ರಾಷ್ಟ್ರಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಕೋಟನೂರು ಗ್ರಾಮದ ಶ್ರೀ ನಂದಿ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು.
ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಬಿ. ವಾಣಿಜ್ಯ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಪ್ರೊ. ದಶರಥ ಮೇತ್ರೆ ಅವರು, ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ರಾ.ಸೇ.ಯೋಜನೆಯಲ್ಲಿ ಪಾಲ್ಗೊಳ್ಳುವುದರಿಂದ ಸ್ನೇಹ, ಸಹಬಾಳ್ವೆ ಮತ್ತು ‘ನಾವೆಲ್ಲರೂ ಒಂದು’ ಎಂಬ ಭಾವನೆ ಬೆಳೆಸಿಕೊಳ್ಳಬಹುದು ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುವ ಮೂಲಕ ಸಮಾಜವನ್ನು ಜಾಗೃತಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯವೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಭಾರಿ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಬೀರನಳ್ಳಿ ಅವರು ಮಾತನಾಡಿ, ಸಮಾಜದಲ್ಲಿ ದೊರೆಯುವ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು, ತಂದೆ-ತಾಯಿಯರ ಪರಿಶ್ರಮವನ್ನು ಮೌಲ್ಯಯುತವಾಗಿ ಪರಿಗಣಿಸಿ ಸಾಧನೆಯತ್ತ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಸ್ವಾಗತ ಮತ್ತು ನಿರೂಪಣೆಯನ್ನು ಡಾ. ಪ್ರಾಣೇಶ ಎಸ್. (ರಾ.ಸೇ.ಯೋಜನೆ ‘ಅ’ ಘಟಕದ ಕಾರ್ಯಕ್ರಮಾಧಿಕಾರಿಗಳು) ನೆರವೇರಿಸಿದರು. ವಂದನಾರ್ಪಣೆಯನ್ನು ಡಾ. ಶಂಕ್ರಪ್ಪ ಕೆ. ನೆರವೇರಿಸಿದರು.
ಈ ಸಂದರ್ಭದಲ್ಲಿ ಕೋಟನೂರು ಗ್ರಾಮದ ಶ್ರೀ ನಂದಿಬಸವೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಸವರಾಜ ಮಾಲಿಪಾಟೀಲ, ಮಲ್ಲಿಕಾರ್ಜುನ ಮಾಲಿಪಾಟೀಲ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನೀಲಕಂಠ ಎಸ್. ವಾಲಿ, ಕನ್ನಡ ವಿಭಾಗದ ಮುಖ್ಯಸ್ಥ ಬಸಣ್ಣಾ ಕಾಗೆ, ಶಿವಾನಂದ ಗುಳಗಿ, ಶಿವರುದ್ರಯ್ಯ ಹಿರೇಮಠ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




















