Home ಜಿಲ್ಲೆ ಕಲಬುರಗಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರ ಪರದಾಟ

ಬಸ್ಸಿಗಾಗಿ ಕಾಯುವ ಪ್ರಯಾಣಿಕರ ಪರದಾಟ

ಚಿತ್ತಾಪುರ: ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತೆರಳುವ ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಾ ತೊಂದರೆ ಅನುಭವಿಸುತ್ತಿರುವ ದೃಶ್ಯ ಕಂಡುಬಂದಿದೆ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿರುವುದು ಕಂಡುಬಂತು.

ಬೆಳಗಿನ ಸಮಯದಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಹಾಗೂ ಸಾರ್ವಜನಿಕರು ತಮ್ಮ ನಿತ್ಯದ ಕೆಲಸಗಳಿಗೆ ಪ್ರಯಾಣಿಸಲು ಬಸ್‍ಗಳನ್ನೇ ಅವಲಂಬಿಸಿದ್ದಾರೆ. ಆದರೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‍ಗಳ ವ್ಯವಸ್ಥೆ ಕಲ್ಪಿಸದಿದ್ದರೆ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಗುತ್ತದೆ.

ವಿಶೇಷವಾಗಿ ಜಾತ್ರೆ, ಹಬ್ಬ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಸಾರಿಗೆ ಇಲಾಖೆಯು ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‍ಗಳನ್ನು ಓಡಿಸಬೇಕು. ವಿದ್ಯಾರ್ಥಿಗಳು ಮತ್ತು ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.