
ಬೀದರ್: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವುದರ ಜೊತೆಗೆ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೂಕ್ತ ಸ್ಥಾನಮಾನ ದೊರಕಿಸಿಕೊಡಬೇಕು. ಸಮಾಜಕ್ಕೆ ನ್ಯಾಯ ಸಿಗುವವರೆಗೂ ಮೀಸಲಾತಿ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಈ ಸಂಬಂಧ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ಸುವರ್ಣ ಸೌಧದ ಮುಂದೆ ನಿರಂತರ ಹೋರಾಟ ತಿವೃಗೊಳಿಸಲಾಗುವುದು ಎಂದು ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು.
ಬುಧವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದರೂ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳಲ್ಲಿ ನಿರೀಕ್ಷಿತ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಭರವಸೆ ನೀಡಿದರೂ ಜಾರಿಯಾಗಿಲ್ಲ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜದ ನಿರಂತರ ಹೋರಾಟದ ಫಲವಾಗಿ ಮೀಸಲಾತಿ ಕಲ್ಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಆದರೆ, ಆ ಘೋಷಣೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಸರ್ಕಾರಗಳು ಕೇವಲ ಭರವಸೆ ನೀಡುವುದರಿಂದ ಸಮಾಜದ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಘೋಷಣೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ರಾಜ್ಯ ಸರ್ಕಾರವೂ ಪಂಚಮಸಾಲಿ ಸಮಾಜದ ಮೀಸಲಾತಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅಗತ್ಯ ಕ್ರಮಗಳನ್ನು ಕೈಗೊಂಡು ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಸಮಾಜದ ಹಿತಕ್ಕಾಗಿ ಹಲವು ವರ್ಷಗಳಿಂದ ನಿರಂತರ ಹೋರಾಟ ನಡೆಸಿಕೊಂಡು ಬರಲಾಗಿದೆ. ಪಾದಯಾತ್ರೆ, ಪ್ರತಿಭಟನೆ ಹಾಗೂ ವಿವಿಧ ಹಂತದ ಹೋರಾಟಗಳ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ. ಆದರೂ ಬೇಡಿಕೆ ಈಡೇರದಿರುವುದು ಬೇಸರದ ಸಂಗತಿ ಎಂದರು.
ಹಿಂದಿನ ಹೋರಾಟದ ಸಂದರ್ಭದಲ್ಲಿ ಸಮಾಜದ ಅಮಾಯಕ ಜನರ ಮೇಲೆ ಹಲ್ಲೆ ನಡೆದಿತ್ತು ಎಂದು ಆರೋಪಿಸಿದ ಅವರು, ಇಂತಹ ಘಟನೆಗಳಿಂದ ಹೋರಾಟದ ಮನೋಬಲ ಕುಗ್ಗುವುದಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಎಲ್ಲ ಮಠಾಧೀಶರ ಬೆಂಬಲಕ್ಕೆ ಮನವಿ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಮಾಜದ ಎಲ್ಲ ಮಠಾಧೀಶರು, ಧಾರ್ಮಿಕ ಮುಖಂಡರು ಹಾಗೂ ಸಂಘಟನೆಗಳ ಸಹಕಾರ ಅಗತ್ಯವಾಗಿದೆ. ಅನೇಕ ಸ್ವಾಮೀಜಿಗಳು ಈಗಾಗಲೇ ಹೋರಾಟಕ್ಕೆ ಆಶೀರ್ವಾದ ಮತ್ತು ಬೆಂಬಲ ನೀಡಿದ್ದಾರೆ. ಧಾರ್ಮಿಕ ಕಾರ್ಯಗಳ ಕಾರಣದಿಂದ ಎಲ್ಲರೂ ಪ್ರತಿಯೊಂದು ಹೋರಾಟದಲ್ಲಿಯೂ ನೇರವಾಗಿ ಭಾಗವಹಿಸಲು ಸಾಧ್ಯವಾಗದಿರಬಹುದು. ಆದರೆ, ಅವರ ನೈತಿಕ ಬೆಂಬಲವೂ ಹೋರಾಟಕ್ಕೆ ದೊಡ್ಡ ಶಕ್ತಿಯಾಗಿದೆ ಎಂದರು.
ಮುಂದಿನ ದಿನಗಳಲ್ಲಿ ನಡೆಯುವ ಹೋರಾಟಗಳಲ್ಲಿ ಎಲ್ಲ ಸಮುದಾಯಗಳ ಮಠಾಧೀಶರು ಹಾಗೂ ಸಮಾಜದ ಮುಖಂಡರು ಕೈಜೋಡಿಸಬೇಕು. ಹೋರಾಟಕ್ಕೆ ಬರುವ ಎಲ್ಲರನ್ನೂ ಸ್ವಾಗತಿಸುತ್ತೇವೆ. ಭಾಗವಹಿಸಲು ಸಾಧ್ಯವಾಗದವರು ಮುಂದಿನ ಹಂತಗಳಲ್ಲಿ ಬೆಂಬಲ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ಬೇಕು: ಪಂಚಮಸಾಲಿ ಸಮಾಜವು ಧಾರ್ಮಿಕ ಹಾಗೂ ಸಾಂಸ್ಕøತಿಕವಾಗಿ ಮುಂದುವರಿದಿದ್ದರೂ ಸಮಾಜದ ಎಲ್ಲ ಕುಟುಂಬಗಳೂ ಆರ್ಥಿಕವಾಗಿ ಸಬಲವಾಗಿವೆ ಎನ್ನುವುದು ಸರಿಯಲ್ಲ. ಅನೇಕ ಕುಟುಂಬಗಳು ಬಡತನದಲ್ಲಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಪರದಾಡುತ್ತಿವೆ. ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದರೂ ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳಿಂದ ವಂಚಿತರಾಗುವ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದಿರುವಿಕೆಯನ್ನು ಸರ್ಕಾರ ಸಮಗ್ರವಾಗಿ ಪರಿಶೀಲಿಸಿ ನ್ಯಾಯಯುತ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು. ಮೀಸಲಾತಿ ಹೋರಾಟವು ಯಾವುದೇ ವ್ಯಕ್ತಿಯ ಪ್ರತಿಷ್ಠೆಗಾಗಿ ಅಲ್ಲ, ಸಮಾಜದ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ನಡೆಯುತ್ತಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮುಖಂಡರಾದ ಓಂಕಾರ ಮಜಗೆ, ಉಮೇಶ ಪಾಟೀಲ, ಮಹೇಶ ಪಾಟೀಲ, ಸುರೇಶ ಕನ್ನಾಳೆ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿದ್ದರು.




















