Home ಜಿಲ್ಲೆ ಕಲಬುರಗಿ ಶಿಕ್ಷಕ ವೃತ್ತಿ ಪವಿತ್ರವಾದದ್ದು: ಸೈಯದ್ ಅನ್ವರ್

ಶಿಕ್ಷಕ ವೃತ್ತಿ ಪವಿತ್ರವಾದದ್ದು: ಸೈಯದ್ ಅನ್ವರ್

ವಡಗೇರಾ: ಸಮಾಜದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ; ಅದು ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸುವ ಜವಾಬ್ದಾರಿಯುತ ಹಾಗೂ ಪವಿತ್ರ ವೃತ್ತಿಯಾಗಿದೆ ಎಂದು ಡಿಡಿಯು ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಸೈಯದ್ ಅನ್ವರ್ ಹೇಳಿದರು.
ಪಟ್ಟಣದ ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲಿ ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಾರೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ, ಅದನ್ನು ಬೆಳೆಸಲು ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಕೊಡುಗೆ ಮಹತ್ವದ್ದಾಗಿದೆ ಎಂದರು.
ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರ ಶಿಕ್ಷಣ ಕ್ಷೇತ್ರದ ಸೇವೆ ಶಿಕ್ಷಕ ಸಮುದಾಯಕ್ಕೆ ಸದಾ ಮಾದರಿಯಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಹಾನ್ ಸಾಧಕರ ಜೀವನ, ತತ್ವ ಹಾಗೂ ಆದರ್ಶಗಳನ್ನು ಅರಿತುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಪರಸ್ಪರ ಗೌರವ ಮತ್ತು ನಂಬಿಕೆಯಿAದ ಕೂಡಿರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಪುಸ್ತಕ ಹಾಗೂ ಸಸಿಗಳನ್ನು ನೆನಪಿನ ಕಾಣಿಕೆಯಾಗಿ ನೀಡಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.