Home Lead News ಆಶೆಯರ ನಿಲ್ಲದ ಪ್ರತಿಭಟನೆ

ಆಶೆಯರ ನಿಲ್ಲದ ಪ್ರತಿಭಟನೆ

ಬೆಂಗಳೂರು, ನ.೨೪-ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿರುವ ಆಶಾ ಕಾರ್ಯಕರ್ತೆಯರ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಗಲು-ರಾತ್ರಿ ಧರಣಿ ನಡೆಸುತ್ತಿರುವ ಸಾವಿರಾರು ಆಶಾ ಕಾರ್ಯಕರ್ತೆಯರು, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.


ನಿನ್ನೆ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತೆಯರು, ಇಂದು ಕೂಡ ವಿಭಿನ್ನ ರೀತಿಯಲ್ಲಿ ಹೋರಾಟ ಮುಂದುವರಿಸಲು ಸಿದ್ಧತೆ ನಡೆಸಿದ್ದಾರೆ. ಸರ್ಕಾರದೊಂದಿಗೆ ನಡೆದ ಮೂರು ಸುತ್ತಿನ ಮಾತುಕತೆಗಳೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದಾರೆ.


ಅನಾರೋಗ್ಯದ ನಡುವೆಯೂ ಹೋರಾಟ


ಒಂದೆಡೆ ಮೈ ಕೊರೆಯುವ ಚಳಿ, ಮತ್ತೊಂದೆಡೆ ನಿರಂತರ ಧರಣಿ. ಇಂತಹ ಪರಿಸ್ಥಿತಿಯಲ್ಲಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಆತಂಕ ಹೆಚ್ಚಾಗಿದೆ. ಪ್ರತಿಭಟನೆಯ ಅವಧಿಯಲ್ಲಿ ಈವರೆಗೆ ೧೮ ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.


ಹೊಟ್ಟೆನೋವು, ರಕ್ತದೊತ್ತಡ, ಮಧುಮೇಹ, ಚಳಿ ಹಾಗೂ ಮೈಕೈ ನೋವಿನಂತಹ ಸಮಸ್ಯೆಗಳಿಂದ ಹಲವರು ಬಳಲುತ್ತಿದ್ದಾರೆ. ಎಂಟು ದಿನಗಳಿಂದ ಬೀದಿಯಲ್ಲೇ ಹೋರಾಟ ನಡೆಸುತ್ತಿರುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ೨,೫೫೦ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ ಎಂದು ಹೋರಾಟಗಾರರು ಹೇಳಿದ್ದಾರೆ.

‘ನಮ್ಮಣ್ಣ ಬರುತ್ತಾರೆ ಎಂದು ಕಾಯುತ್ತಿದ್ದೇವೆ’:


ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿ ತಮ್ಮನ್ನು ಸಹೋದರಿಯರು ಎಂದು ಕರೆಯುತ್ತಾರೆ. ಆದರೆ, ತಾವು ಎಂಟು ದಿನಗಳಿಂದ ಬೀದಿಯಲ್ಲಿ ಕುಳಿತು ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


“ನಮ್ಮಣ್ಣ ಬರುತ್ತಾರೆ ಎಂದು ಕಾಯುತ್ತಿದ್ದೇವೆ. ಆದರೆ, ಅವರು ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಎಂಟು ದಿನಗಳಿಂದ ನಾವು ಬೀದಿಯಲ್ಲಿದ್ದೇವೆ. ನಮ್ಮನ್ನು ತಂಗಿಯಂದಿರು ಎಂದು ಕರೆಯುವ ಸಿಎಂ, ತಮ್ಮ ಮನೆಯ ಹೆಣ್ಣುಮಕ್ಕಳು ಇದೇ ರೀತಿ ಬೀದಿಯಲ್ಲಿ ಕುಳಿತಿದ್ದರೆ ಸುಮ್ಮನಿರುತ್ತಿದ್ದರೇ? ನಮ್ಮ ನೋವು ಅವರಿಗೆ ಅರ್ಥವಾಗುತ್ತಿಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.


“ಇಂತಹ ಸರ್ಕಾರ ನಮಗೆ ಯಾಕೆ ಬೇಕು? ನಮ್ಮ ತಾಳ್ಮೆಯನ್ನು ಹೆಚ್ಚು ಪರೀಕ್ಷಿಸಬೇಡಿ. ನಮ್ಮ ಬೇಡಿಕೆಗಳನ್ನು ಈಡೇರಿಸಿ. ಇದು ಸರ್ಕಾರಕ್ಕೆ ಒಳ್ಳೆಯದಲ್ಲ. ನಾವು ಯಾರ ಬಳಿಯೂ ಭಿಕ್ಷೆ ಕೇಳುತ್ತಿಲ್ಲ; ಗೌರವದಿಂದ ಬದುಕುವ ಹಕ್ಕನ್ನು ಕೇಳುತ್ತಿದ್ದೇವೆ. ಐದು ಸಾವಿರ ರೂಪಾಯಿಯಲ್ಲಿ ಇಂದಿನ ದಿನಗಳಲ್ಲಿ ಜೀವನ ನಡೆಸಲು ಸಾಧ್ಯವೇ?” ಎಂದು ಆಶಾ ಕಾರ್ಯಕರ್ತೆಯರು ಅಸಮಾಧಾನ ಹೊರಹಾಕಿದ್ದಾರೆ.

ಬೇಡಿಕೆ ಈಡೇರುವವರೆಗೂ ಹೋರಾಟ:


ಸರ್ಕಾರದ ಸಭೆಗಳು ಮತ್ತು ಮಾತುಕತೆಗಳಿಂದ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ದೊರೆಯುವವರೆಗೂ ಫ್ರೀಡಂ ಪಾರ್ಕ್‌ನಿಂದ ಕದಲುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.


ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ, ಸರ್ಕಾರ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ. ಒಂದೆಡೆ ಹೋರಾಟ ತೀವ್ರಗೊಳ್ಳುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನಾಕಾರರ ಆರೋಗ್ಯದ ಬಗ್ಗೆಯೂ ಕಳವಳ ಹೆಚ್ಚಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂಬುದು ಹೋರಾಟಗಾರರ ಒತ್ತಾಯವಾಗಿದೆ.