Home ಜಿಲ್ಲೆ ಕಲಬುರಗಿ ಪರಿಸರ ಸಂರಕ್ಷಣೆಗಾಗಿ ಸಾರ್ವಜನಿಕ ಸಾರಿಗೆಯ ಬಳಕೆ ಅಗತ್ಯ

ಪರಿಸರ ಸಂರಕ್ಷಣೆಗಾಗಿ ಸಾರ್ವಜನಿಕ ಸಾರಿಗೆಯ ಬಳಕೆ ಅಗತ್ಯ

ಕಲಬುರಗಿ: ಎಲ್ಲರು ವೈಯಕ್ತಿಯ ವಾಹನಗಳನ್ನು ಬಳಸುವುದುರಿಂದ ಪೆಟ್ರೋಲಿಯಂ ಆಮದಿನ ಪ್ರಮಾಣ ಹೆಚ್ಚಾಗುತ್ತದೆ. ವಾಯು, ಶಬ್ದ ಮಾಲಿನ್ಯ ಅಧಿಕವಾಗಿ ಪರಿಸರ ಮಾಲಿನ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕ ಸಾರಿಗೆಯ ಬಳಕೆಗೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವಿಶ್ವ ಸಾರ್ವಜನಿಕ ಸಾರಿಗೆ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.
ಜಗತ್ತಿನಾದ್ಯಂತ ಅಸಂಖ್ಯಾತ ಜನರು ಪ್ರಯಾಣಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ನೆಚ್ಚಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ, ಟ್ರಾಫಿಕ್ ಸಮಸ್ಯೆ ಸೇರಿದಂತೆ ಮುಂತಾದ ಸಮಸ್ಯೆಗಳಿಗೆ ಸಾರ್ವಜನಿಕ ಸಾರಿಗೆ ಪರಿಹಾರವಾಗಿದೆ. ಇದರ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ನ.10ರಂದು ದಿನವನ್ನು ಆಚರಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಂಪ್ಯೂಟರ ತರಬೇತಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಮಾಜ ಸೇವಕ ಓಂಕಾರ ವಠಾರ, ಉಪನ್ಯಾಸಕ ಮಹಾದೇವ ಬಿರಾದಾರ ಸೇರಿದಂತೆ ಇನ್ನಿತರರಿದ್ದರು.