
ಬೀದರ್: ‘ರಂಗಭೂಮಿ ಕೇವಲ ಮನರಂಜನೆಯ ಮಾಧ್ಯಮವಲ್ಲ. ಅಭಿನಯ ಕೌಶಲ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಪರಿಣಾಮಕಾರಿ ಕಲಾಪ್ರಕಾರವಾಗಿದೆ. ವಿದ್ಯಾರ್ಥಿಗಳು ರಂಗಭೂಮಿ ತರಬೇತಿಯ ಸದುಪಯೋಗ ಪಡೆದುಕೊಂಡು ಕಲಾಕ್ಷೇತ್ರದಲ್ಲಿ ಸಾಧನೆ ಮಾಡಬೇಕು’ ಎಂದು ಕರ್ನಾಟಕ ರಾಷ್ಡ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಭಿಪ್ರಾಯಪಟ್ಟರು.
ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ಡಿ) ಹಾಗೂ ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ, ಸೋಮವಾರ ಕರ್ನಾಟಕ ಕಾಲೇಜಿನ ಸಹಕಾರದೊಂದಿಗೆ ಆಯೋಜಿಸಿದ್ದ ರಂಗಭೂಮಿ ತರಬೇತಿ ಶಿಬಿರದ ಸಮಾರೋಪ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಬೀದರ್ ಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ರಂಗಭೂಮಿ ತರಬೇತಿಯ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ. ಇಂತಹ ಶಿಬಿರಗಳಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತದೆ. ವಿದ್ಯಾರ್ಥಿಗಳು ತರಬೇತಿಯಲ್ಲಿ ಕಲಿತ ಕೌಶಲಗಳನ್ನು ನಿರಂತರ ಅಭ್ಯಾಸದ ಮೂಲಕ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪೆÇ್ರ ಜಗನ್ನಾಥ ಹೆಬ್ಬಾಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ನಾಟಕ ಶಾಲೆಯು ದೇಶದ ಪ್ರತಿಷ್ಠಿತ ರಂಗಭೂಮಿ ತರಬೇತಿ ಸಂಸ್ಥೆಗಳಲ್ಲಿ ಒಂದಾಗಿದ್ದು, ಇಲ್ಲಿ ತರಬೇತಿ ಪಡೆದ ಅನೇಕ ಕಲಾವಿದರು ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳ ಚಲನಚಿತ್ರ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಭಿನಯ, ದೇಹಭಾಷೆ, ಸಂಭಾಷಣೆ, ಭಾವಾಭಿವ್ಯಕ್ತಿ ಮತ್ತು ಪಾತ್ರ ನಿರ್ವಹಣೆಯಂತಹ ವಿಷಯಗಳಲ್ಲಿ ಶಿಸ್ತುಬದ್ಧ ತರಬೇತಿ ನೀಡುವುದು ಈ ಸಂಸ್ಥೆಯ ವಿಶೇಷತೆಯಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮನ್ನಾನ್ ಸೇಠ್, ಶಿಬಿರದ ನಿರ್ದೇಶಕ ಮಹೇಶ ಪಾಟೀಲ, ನಿವೃತ್ತ ಪ್ರಾಚಾರ್ಯ ಡಾ. ಪ್ರಭುಶೆಟ್ಟಿ ಮುಲಗೆ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ, ಸಂಸ್ಥೆಯ ಆಡಳಿತಾಧಿಕಾರಿ ಪೆÇ್ರ. ಅನಿಲಕುಮಾರ ಆಣದೂರೆ ಹಾಗೂ ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಪೆÇ್ರ. ಸೋಮನಾಥ ಬಿರಾದಾರ ಉಪಸ್ಥಿತರಿದ್ದರು.
ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಸುನೀತಾ ಕೂಡ್ಲಿಕರ್ ಕಾರ್ಯಕ್ರಮ ನಿರ್ವಹಿಸಿದರು. ನೂರಾರು ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕಲಾಸಕ್ತರು ಭಾಗವಹಿಸಿದ್ದರು.





















