
ಕರಜಗಿ: ಬ್ರಿಟಿಷರ ವಿರುದ್ಧ ಕೊನೆಯ ಉಸಿರಿರುವವರೆಗೂ ಹೋರಾಡಿ ಅವರ ಎದೆ ನಡುಗಿಸಿದ ವೀರ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಅವರು ದೇಶದ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಪಪ್ಪು ಪಟೇಲ್ ಹೇಳಿದರು.
ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಕೇವಲ ಒಬ್ಬ ರಾಜರಾಗಿರಲಿಲ್ಲ. ಅವರು ಧೈರ್ಯ, ಸಾಹಸ, ದೇಶಪ್ರೇಮ ಮತ್ತು ಸ್ವಾಭಿಮಾನದ ಪ್ರತೀಕವಾಗಿದ್ದರು. ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿದ ಧೀರ ಆಡಳಿತಗಾರರಲ್ಲಿ ಟಿಪ್ಪು ಸುಲ್ತಾನ್ ಪ್ರಮುಖರಾಗಿದ್ದಾರೆ ಎಂದು ಹೇಳಿದರು.
ಟಿಪ್ಪು ಸುಲ್ತಾನ್ ತಮ್ಮ ಆಡಳಿತಾವಧಿಯಲ್ಲಿ ಕೃಷಿ, ನೀರಾವರಿ, ವ್ಯಾಪಾರ ಹಾಗೂ ರಕ್ಷಣಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಆಧುನಿಕ ಯುದ್ಧ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬ್ರಿಟಿಷರಿಗೆ ಪ್ರಬಲ ಸವಾಲು ಹಾಕಿದ್ದರು. ದೇಶದ ಸ್ವಾತಂತ್ರ್ಯ ಮತ್ತು ಸ್ವಾಭಿಮಾನಕ್ಕಾಗಿ ಹೋರಾಡಿದ ಅವರ ಧೈರ್ಯ, ತ್ಯಾಗ ಹಾಗೂ ಹೋರಾಟದ ಮನೋಭಾವವನ್ನು ಯುವಜನತೆ ಅರಿತುಕೊಳ್ಳಬೇಕು ಎಂದು ಪಪ್ಪು ಪಟೇಲ್ ತಿಳಿಸಿದರು
ನಂತರ ಮಾತನಾಡಿದ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇರ್ಫಾನ್ ಜಮಾದಾರ
ಟಿಪ್ಪು ಸುಲ್ತಾನ್ ಅವರ ಜೀವನ ಚರಿತ್ರೆ ಮತ್ತು ದೇಶಪ್ರೇಮದ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು. ಮಹನೀಯರ ಜಯಂತಿಗಳನ್ನು ಆಚರಿಸುವುದರ ಜೊತೆಗೆ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಟಿಪ್ಪು ಅಭಿಮಾನಿಗಳು ಉಪಸ್ಥಿತರಿದ್ದು, ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು.




















