
ಯಾದಗಿರಿ :ಮೇ.೧೧: ಸಾರ್ವಜನಿಕ ಆರೋಗ್ಯ ಸೇವೆ ನೀಡಬೇಕಾದ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಶೌಚಾಲಯಗಳ ಅವ್ಯವಸ್ಥೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಪತ್ರೆಯಲ್ಲಿ ಸರಿಯಾದ ಸ್ವಚ್ಛತೆ ಇಲ್ಲದ ಕಾರಣ ರೋಗ ಚಿಕಿತ್ಸೆಗಾಗಿ ಬರುವ ಜನರಿಗೆ ಮತ್ತಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಗೆ ಪ್ರತಿದಿನ ಯಾದಗಿರಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ತಾಲ್ಲೂಕುಗಳಿಂದ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಆದರೆ ಆಸ್ಪತ್ರೆಯ ಶೌಚಾಲಯಗಳಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದೆ ದುರ್ವಾಸನೆ, ಕಸಕಡ್ಡಿ ಹಾಗೂ ಅಸ್ವಚ್ಛ ವಾತಾವರಣ ಕಂಡು ಬರುತ್ತಿದೆ ಎನ್ನಲಾಗಿದೆ.
ರೋಗ ಮುಕ್ತಿಗಾಗಿ ಆಸ್ಪತ್ರೆಗೆ ಬರುವ ಜನರಿಗೆ ಇದೇ ಶೌಚಾಲಯಗಳಿಂದ ಸೋಂಕು ಹರಡುವ ಆತಂಕ ಎದುರಾಗಿದ್ದು, ಮಹಿಳೆಯರು, ವೃದ್ಧರು ಮತ್ತು ಮಕ್ಕಳಿಗೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ತಕ್ಷಣವೇ ಆಸ್ಪತ್ರೆ ಆಡಳಿತ ಮಂಡಳಿ ಗಮನಹರಿಸಿ ಶೌಚಾಲಯಗಳ ಸ್ವಚ್ಛತೆ ಕಾಪಾಡಬೇಕು, ನಿರಂತರವಾಗಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಿ ಆರೋಗ್ಯಕರ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾದಿಗ ದಂಡೋರ (ರಿ) ಹೋರಾಟ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಸಾವುರ್ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ನಿರ್ವಹಣೆ ಅತ್ಯಂತ ಕಳಪೆಯಾಗಿದ್ದು, ಶೌಚಾಲಯಗಳ ದುಸ್ಥಿತಿ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ. ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.























