
ಹುಲಸೂರು:ಜು.31: ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ. ಪತ್ರಕರ್ತರು ವಾಸ್ತವಾಂಶಗಳನ್ನು ಅರಿತು, ಯಾವುದೇ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದಾಗ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ ಎಂದು ವಿಶೇಷ ಉಪನ್ಯಾಸಕ ಗುರುನಾಥ ಅಕ್ಕಣ್ಣ ಹೇಳಿದರು.
ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳಿಗೂ ಬೆಳಕು ಚೆಲ್ಲುವ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಗ್ರಾಮೀಣ ಭಾಗದಲ್ಲಿ ಪತ್ರಕರ್ತರು ಹಲವು ಸವಾಲುಗಳ ನಡುವೆಯೂ ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಕಾರ್ಯ ಮಾಡುತ್ತಿದ್ದಾರೆ. ಪತ್ರಕರ್ತರು ಸತ್ಯ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಬದ್ಧತೆಯನ್ನು ತಮ್ಮ ವೃತ್ತಿಯ ಮೂಲಮಂತ್ರವನ್ನಾಗಿಸಿಕೊಂಡು ಮುನ್ನಡೆಯಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹುಲಸೂರು ಶ್ರೀ ಶಿವಾನಂದ ಸ್ವಾಮೀಜಿ ಮಾತನಾಡಿ, ಪತ್ರಿಕೆಗಳು ಸಮಾಜದ ಆಗುಹೋಗುಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಒಳ್ಳೆಯ ವಿಚಾರಗಳನ್ನು ಪೆÇ್ರೀತ್ಸಾಹಿಸುವ ಮತ್ತು ತಪ್ಪುಗಳನ್ನು ತಿದ್ದುವ ಮಹತ್ವದ ಕೆಲಸ ಮಾಡುತ್ತಿವೆ. ಪತ್ರಕರ್ತರು ಸಮಾಜದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸಬೇಕು. ಮಾಧ್ಯಮ ಕ್ಷೇತ್ರದ ಘನತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಂಡು ಮುನ್ನಡೆಯುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಆಶೀರ್ವಚನ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಕುಂದುಕೊರತೆಗಳು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಮೂಲಕ ಪತ್ರಕರ್ತರು ಜನರು ಹಾಗೂ ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಸ್ತುನಿಷ್ಠ ವರದಿಗಾರಿಕೆಯಿಂದ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಬೇಕು ಎಂದರು.
ಇನ್ನೊಬ್ಬ ಉಪನ್ಯಾಸಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣುಗಳಿದ್ದಂತೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಸತ್ಯವನ್ನು ಜನರ ಮುಂದಿಡುವ ಜವಾಬ್ದಾರಿ ಅವರ ಮೇಲಿದೆ. ಸುದ್ದಿಯ ಹಿಂದೆ ಇರುವ ವಾಸ್ತವವನ್ನು ಅರಿತು, ಪರಿಶೀಲಿತ ಮಾಹಿತಿಯನ್ನೇ ಜನರಿಗೆ ತಲುಪಿಸುವ ಮೂಲಕ ಪತ್ರಿಕೋದ್ಯಮದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮಾತನಾಡಿ, ರಾಜ್ಯದಾದ್ಯಂತ ಪತ್ರಕರ್ತರ ಹಕ್ಕುಗಳು, ಗೌರವ ಮತ್ತು ಕಲ್ಯಾಣಕ್ಕಾಗಿ ಸಂಘ ನಿರಂತರವಾಗಿ ಹೋರಾಟ ನಡೆಸುತ್ತ ಬಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಲವು ಸವಾಲುಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘವು ಸರ್ಕಾರದ ಗಮನ ಸೆಳೆಯುತ್ತಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಘದಿಂದ ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ವೃತ್ತಿಪರ ಹಿತಾಸಕ್ತಿಗಳನ್ನು ರಕ್ಷಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರು ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಮೆಂಟೇ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಬೋಸ್ಲೆ, ಉಪಾಧ್ಯಕ್ಷೆ ಮೀರಾಬಾಯಿ ಗಾಯಕವಾಡ, ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ವಾಮಿದಾಸ್ ನಾಗೂರೆ, ಸಂತೋಷ ಚೆಟ್ಟಿ, ಸಹಾಯಕ ಕೃಷಿ ನಿರ್ದೇಶಕ ಗೌತಮ್ ವಾಗ್ಮಾರೆ, ಸಮಾಜ ಕಲ್ಯಾಣ ಅಧಿಕಾರಿ ದಿಲೀಪ್ ಉತ್ತಮ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಸಿದ್ರಾಮ ಕಾಮಣ್ಣಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನಾಗರಾಜ ಹಾವಣ್ಣ, ಕೃಷಿ ಅಧಿಕಾರಿ ಆಕಾಶ, ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶಿನಾಥ್ ಪಾರ್ಶೆಟ್ಟೆ, ಬಂಡೂರಾವ ಪಾಟೀಲ, ಅಬ್ರಾರ ಸೌಧಗಾರ, ಆಸಿಫ್ ಸಿಲಾರ್ ಸೇರಿದಂತೆ ತಾಲ್ಲೂಕು ಘಟಕದ ಪತ್ರಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೀರಭದ್ರೇಶ್ವರ ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ಸ್ವಾಗತ ಗೀತೆ ಹಾಡಲಾಯಿತು. ಕಾರ್ಯಕ್ರಮವನ್ನು ಎಂ. ಬಿ. ಪಾಂಚಾಳ ನಿರೂಪಿಸಿದರು.






























