
ವಿಜಯಪುರ, ಅ.10:ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಭವನದಲ್ಲಿ ಗುರುವಾರ ನಡೆದ ವಿಜಯಪುರ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ನಾಯಕತ್ವದ ಗುಣ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವ ಮನೋಭಾವ ಬೆಳೆಸುತ್ತವೆ ಎಂದರು.
ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ನಡೆಸಿದ ಚರ್ಚೆ, ಪ್ರಶ್ನೋತ್ತರ ಹಾಗೂ ಸಂಸದೀಯ ಕಲಾಪದ ಪ್ರಸ್ತುತಿ ನೈಜ ಸಂಸತ್ತಿನ ಕಲಾಪದ ಅನುಭವ ನೀಡಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಸಾಮಾಜಿಕ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ಸಾಮಥ್ರ್ಯ ಬೆಳೆಸಿಕೊಳ್ಳಬೇಕು. ಅಧ್ಯಯನಶೀಲತೆ, ಪ್ರಾಮಾಣಿಕತೆ, ಶಿಸ್ತು ಹಾಗೂ ಜವಾಬ್ದಾರಿಯನ್ನು ಮೈಗೂಢಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜಯಪುರ ತಹಶೀಲ್ದಾರ್ ಪ್ರಶಾಂತ ಚನಗೊಂಡ ಮಾತನಾಡಿ, ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಭಾಗವಹಿಸಿರುವುದು ಸಂತಸದ ಸಂಗತಿ. ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ವಿಜಯಪುರ ತಾಲೂಕಿನ ಕೀರ್ತಿ ಹೆಚ್ಚಿಸಲಿ ಎಂದು ಹಾರೈಸಿದರು.
ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ವಿವಿಧ ಕಾಲೇಜುಗಳ 195 ವಿದ್ಯಾರ್ಥಿಗಳು ಭಾಗವಹಿಸಿ ಸಂಸದೀಯ ಕಲಾಪದ ಮಾದರಿ ಪ್ರದರ್ಶಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತ ಬೆಳ್ಳುಂಡಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ, ಸಹಾಯಕ ನಿರ್ದೇಶಕ ಬಿ.ಜೆ. ಇಂಡಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಯೋತಿ, ನವಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ, ಪದವಿಪೂರ್ವ ಕಾಲೇಜಿನ ರಜಪೂತ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯಗಳ ನಿಲಯಪಾಲಕರು, ಸಿಬ್ಬಂದಿ, ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಹ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ ವಂದಿಸಿದರು.


















