
ವಿಜಯಪುರ, ಎ. 4: ಜಿಲ್ಲೆಯಲ್ಲಿ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು ಜಿಲ್ಲಾಧಿಕಾರಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಈಗ ಮತ್ತೆ ಅಕಾಲಿಕ ಮಳೆಯಾಗಿ ಕೆಲವು ಕಡೆ ದ್ರಾಕ್ಷಿ ಮತ್ತು ಒಣದ್ರಾಕ್ಷಿ ಶೆಡ್ ಗಳು ಹಾನಿಯಾಗಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯಲ್ಲಿ ಬೆಳೆಹಾನಿಯಾದ ಯಾವುದೇ ರೈತರ ಹೆಸರು ಬಿಟ್ಟು ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೃಷಿ ಮತ್ತು ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಚಿವರು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ ದೊಡ್ಡಿಮನಿ ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಅವರೊಂದಿಗೂ ಮಾತನಾಡಿರುವ ಸಚಿವರು, ಬೆಳೆ ಹಾನಿ ಕುರಿತು ಸಮಗ್ರ ಮತ್ತು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.




















